ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸಲು ನಿರ್ಣಯ

ಕುಂದಾಪುರ, ಕಾರ್ಕಳದಲ್ಲಿ ತಲಾ 15, ಜಿಲ್ಲಾ ಆಸ್ಪತ್ರೆಯಲ್ಲಿ 20 ಹೆಚ್ಚುವರಿ ಐಸಿಯು ಬೆಡ್‌: ಸಚಿವ ವಿ.ಸುನಿಲ್ ಕುಮಾರ್
Last Updated 7 ಆಗಸ್ಟ್ 2021, 13:02 IST
ಅಕ್ಷರ ಗಾತ್ರ

ಉಡುಪಿ: ಕೋವಿಡ್‌ ಸೋಂಕಿತರಿಗೆ ಹಾಸಿಕೆಗಳ ಕೊರತೆ ಎದುರಾಗಬಾರದು ಎಂಬ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಐಸಿಯು ಹಾಸಿಗೆಗಳ ಸಂಖ್ಯೆ ಹೆಚ್ಚಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್‌ ಸ್ಥಿತಿಗತಿ ಹಾಗೂ ನೆರೆ ಹಾನಿ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಆ.31ರೊಳಗೆ ಕಾರ್ಕಳ ತಾಲ್ಲೂಕು ಆಸ್ಪತ್ರೆಯಲ್ಲಿ 15, ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ 15 ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ 20 ಹೆಚ್ವುವರಿ ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಕಳೆದ ವರ್ಷ ಆಮ್ಲಜನಕ ಹಾಗೂ ಐಸಿಯು ಹಾಸಿಗೆಗಳ ಕೊರತೆ ಎದುರಾಗಿತ್ತು. ಈ ವರ್ಷ ಸಮಸ್ಯೆ ಮರುಕಳಿಸದಂತೆ ಎಚ್ಚರ ವಹಿಸಲಾಗಿದೆ. ಕಾರ್ಕಳ, ಉಡುಪಿ ಹಾಗೂ ಕುಂದಾಪುರದಲ್ಲಿ ಆಮ್ಲಜನಕ ಉತ್ಪಾದಕಗಳ ಘಟಕಗಳನ್ನು ನಿರ್ಮಾಣಮಾಡಲಾಗಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿವೆ ಎಂದರು.

ಕೊರೊನಾ ಹರಡುವಿಕೆ ತಡೆಗೆ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಸೋಂಕಿತರ ಚಿಕಿತ್ಸೆಗೆ ಕೋವಿಡ್‌ ಕೇಂದ್ರಗಳಲ್ಲಿ 2,000 ಹಾಸಿಗೆಗಳ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ವಿವರ ನೀಡಿದರು.

ಜಿಲ್ಲೆಯಲ್ಲಿ 2ನೇ ಡೋಸ್‌ ಕೋವಿಡ್‌ ಲಸಿಕೆ ಹಾಕಲು 34 ಸಾವಿರ ಡೋಸ್ ಕೊರತೆ ಇದೆ. ಜಿಲ್ಲೆಗೆ ಹೆಚ್ಚುವರಿ ಲಸಿಕೆ ಪೂರೈಕೆಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಜಿಲ್ಲೆಯಲ್ಲಿ 100 ಮೀಟರ್ ವ್ಯಾಪ್ತಿಯಲ್ಲಿ ಐದು ಕೋವಿಡ್ ಪ್ರಕರಣಗಳು ಪತ್ತೆಯಾದರೆ, ಕಂಟೈನ್‌ಮೆಂಟ್ ವಲಯವಾಗಿ ಘೋಷಿಸಲಾಗುವುದು. ಸೋಂಕಿತರ ಮನೆ ಸೀಲ್‌ಡೌನ್ ಮಾಡಲಾಗುವುದು ಎಂದರು.

ಎರಡನೇ ಅಲೆಯಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳದ ಗ್ರಾಮ ಪಂಚಾಯಿತಿಗಳಲ್ಲಿ ಈ ಬಾರಿ ಹೆಚ್ಚು ಸೋಂಕು ಪತ್ತೆಯಾಗುತ್ತಿದ್ದು, ನಿಯಂತ್ರಣಕ್ಕೆ ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳ ಪಾಲನೆಗೆ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಯು ಕಾರ್ಯ ನಿರ್ವಹಿಸುತ್ತಿದ್ದು, ಮಳೆ ಹಾನಿಯಿಂದ ಮನೆಗಳು ಕುಸಿದರೆ 48 ಗಂಟೆಯೊಳಗೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ತಹಶೀಲ್ದಾರ್‌ಗಳಿಗೆ ತುರ್ತು ನಿರ್ವಹಣೆಗೆ ಹಣ ಬಿಡುಗಡೆ ಮಾಡಲಾಗಿದೆ. ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತದ ಬಳಿ ₹ 11 ಕೋಟಿ ಲಭ್ಯವಿದೆ ಇದೆ ಎಂದರು.

ತೌತೆ ಚಂಡಮಾರುತದಿಂದ ಜಿಲ್ಲೆಯಲ್ಲಿ ₹ 100 ಕೋಟಿ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

‘ಸ್ವಯಂ ನಿಯಂತ್ರಣ ಅಗತ್ಯ’

ಕೋವಿಡ್ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯ. ಪ್ರತಿಯೊಬ್ಬರೂ ಸ್ವಯಂ ನಿಯಂತ್ರಣ ಹೇರಿಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸಿದರೆ ಸೋಂಕಿ ನಿಯಂತ್ರಣಕ್ಕೆ ಬರುತ್ತದೆ. ಜಿಲ್ಲೆಯಲ್ಲಿ ಯಾವುದೇ ಅಭಿನಂದನಾ ಸಮಾರಂಭಗಳನ್ನು ಆಯೋಜಿಸದಂತೆ ಕಾರ್ಯಕರ್ತರಿಗೆ ತಿಳಿಸಿ ಸ್ವಯಂ ಅನುಶಾಸನ ಹಾಕಿಕೊಂಡಿದ್ದೇನೆ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಶಾಸಕ ರಘುಪತಿ ಭಟ್‌, ಜಿಲ್ಲಾಧಿಕಾರಿ ಜಿ.ಜಗದೀಶ್‌, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್‌ಪಿ ಎನ್‌.ವಿಷ್ಣುವರ್ಧನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT