ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಂಕನಿಡಿಯೂರು | ಹೂತಿರುವ ಕಸ ತಕ್ಷಣ ತೆರವು ಮಾಡಿ: ಶಾಸಕ ಯಶ್‌ಪಾಲ್ ಸೂಚನೆ

Published 6 ಜುಲೈ 2024, 6:20 IST
Last Updated 6 ಜುಲೈ 2024, 6:20 IST
ಅಕ್ಷರ ಗಾತ್ರ

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲಾರ್ಕಲಬೆಟ್ಟುವಿನ ತ್ಯಾಜ್ಯ ಸಂಸ್ಕರಣಾ ಘಟಕದ ಒಳಗಡೆ ಕೊಳವೆ ಬಾವಿ ಬಳಿ ಹೊಂಡ ತೋಡಿ ಕಸ ಹೂತು ಹಾಕಿರುವ ಪರಿಣಾಮವಾಗಿ ಬಾವಿ, ಕೊಳವೆ ಬಾವಿಯ ನೀರು ಕಲುಷಿತಗೊಂಡಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಸವನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನವಸತಿ ಪ್ರದೇಶ ಹಾಗೂ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿಯ ಬಳಿ ಅವೈಜ್ಞಾನಿಕ ರೀತಿಯಲ್ಲಿ ಕಸವನ್ನು ಹೂತು ಹಾಕಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಈ ಬಗ್ಗೆ ಯಾವುದೇ ಸಭೆ ನಡೆಸದೆ, ಚರ್ಚೆ ನಡೆಸದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ತಕ್ಷಣ ವರದಿ ನೀಡುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ, ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮಸ್ಥರು ಪ್ರತಿಭಟನೆ ನಡೆಸಿದರೂ ಕಸ ತೆರವಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲೆಯಾದ್ಯಂತ  ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಹೂತಿರುವ ಕಸವನ್ನು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೇಳಿದರು.

ಉಡುಪಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಯಾನಂದ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ  ಅರುಣ್, ಪಂಚಾಯಿತಿ ಸದಸ್ಯ ವಿನೋದ್, ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT