ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ವಿಧಾನ ಪರಿಷತ್ ಚುನಾವಣೆ ಗೆಲುವು– ಬಿಜೆಪಿ ವಿಜಯೋತ್ಸವ

Published 7 ಜೂನ್ 2024, 13:19 IST
Last Updated 7 ಜೂನ್ 2024, 13:19 IST
ಅಕ್ಷರ ಗಾತ್ರ

ಉಡುಪಿ: ಯಾರು ಎಷ್ಟೇ ಪ್ರಭಾವಿಯಾಗಿದ್ದರೂ ಪಕ್ಷವನ್ನು ಮೀರಿ ನಿಲ್ಲಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ನೀಡಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎನ್‍ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರು ಜಯಗಳಿಸಿರುವುದಕ್ಕೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರು ಸ್ಪರ್ಧೆಗಿಳಿದಾಗ, ನಮಗೆ ಹಿನ್ನಡೆ ಉಂಟಾಗಬಹುದೆಂಬ ಸಣ್ಣ ಆತಂಕ ಕಾಡಿತ್ತು. ಆದರೆ ಪಕ್ಷದ ಕಾರ್ಯಕರ್ತರು ಮತ್ತು ಸಂಘಟನೆ ಗಟ್ಟಿ ಇರುವುದರಿಂದ ಎಂತಹ ಕಠಿಣ ಚುನಾವಣೆಯನ್ನೂ ನಿರಾಯಾಸವಾಗಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದರು.

ಎರಡೂ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ನಿರೀಕ್ಷೆಗೆ ಮೀರಿದ ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಾನು ಪಕ್ಷದ ಜಿಲ್ಲಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ, ಇದು ಚುನಾವಣೆ ಪರ್ವ ಎಂದಿದ್ದೆ. ಈಗಾಗಲೇ ನಡೆದ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಅಂತರದಿಂದ ಬಿಜೆಪಿ ಗೆಲುವು ಸಾಧಿಸಿದೆ ಮತ್ತು ಗೆಲುವಿನ ಪರ್ವ ಆರಂಭವಾಗಿದೆ ಎಂದರು.

ಅಭ್ಯರ್ಥಿಯ ಆಯ್ಕೆ ಸಂದರ್ಭದಲ್ಲಿ  ಆಸೆ, ಆಕಾಂಕ್ಷೆಗಳು ಸಹಜ‌. ಆದರೆ, ಪಕ್ಷ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಅವರನ್ನು ಬೆಂಬಲಿಸುವುದು ಪಕ್ಷ ನಿಷ್ಠೆ ಮತ್ತು ಧರ್ಮ ಎಂದೆನಿಸುತ್ತದೆ. ರಘಪತಿ ಭಟ್ ಅವರು ಪಕ್ಷೇತರರಾಗಿ ಸ್ಪರ್ಧಿಸಿರೂ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಷ್ಟೇ ಮತಹಾಕಿದ್ದಾರೆ. ಪ್ರಾಮಾಣಿಕವಾಗಿರುವ ನಮ್ಮ ಪಕ್ಷಕ್ಕೆ ಯಾವತ್ತೂ ಸೋಲಿಲ್ಲ ಎಂದು ಹೇಳಿದರು.

ಪಕ್ಷದ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಈ ಬಾರಿಯ ಗೆಲುವು ಪಕ್ಷದ ಕಾರ್ಯಕರ್ತರಿಗೆ ಸಂದ ಜಯ ಎಂದು ಬಣ್ಣಿಸಿದರು.

ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ 1988ರಿಂದ ಸತತವಾಗಿ ಗೆಲ್ಲುತ್ತಾ ಬಂದಿದೆ. ಎಷ್ಟೇ ಪ್ರಭಾವಿಗಳಾದರೂ ಗೆಲುವಿಗೆ ಪಕ್ಷದ ಆಸರೆ ಅತ್ಯಗತ್ಯ ಎಂಬುದು ಈ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ನಮ್ಮೊಟ್ಟಿಗಿದ್ದು, ಹೊರಗಿನವರಿಗಾಗಿ ಕೆಲಸ ಮಾಡುವವರನ್ನೂ ಪಕ್ಷವು ಗಮನಿಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಎಲ್ಲಾ ಕಾರ್ಯಕರ್ತರು ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದರೆ ನಮಗೆ ಗೆಲುವು ನಿಶ್ಚಿತ. ಎಲ್ಲರ ಪರಿಶ್ರಮದಿಂದ ಜಯ ಲಭಿಸಿದೆ ಎಂದು ಹೇಳಿದರು.

ಮುಖಂಡರಾದ ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT