ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಸೋಮವಾರ ಎಸಿ ರಹಿತ ದಿನ

ಜಾಗತಿಕ ತಾಪಮಾನ ತಡೆಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಕ್ರಮ
Last Updated 6 ಜೂನ್ 2019, 10:06 IST
ಅಕ್ಷರ ಗಾತ್ರ

ಉಡುಪಿ: ಜಾಗತಿಕ ತಾಪಮಾನ ತಗ್ಗಿಸುವ ಉದ್ದೇಶದಿಂದ ಪ್ರತಿ ಸೋಮವಾರ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳ ಎಸಿ ಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.

ಗುರುವಾರ ಸಮೂಹ ಸಾರಿಗೆಯಲ್ಲಿ ಸಿಬ್ಬಂದಿಯ ಜತೆಗೆ ಕಚೇರಿಗೆ ತೆರಳುವ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಾಯು ಮಾಲಿನ್ಯ ನಿಯಂತ್ರಣ’ ಈ ವರ್ಷದವಿಶ್ವ ಪರಿಸರ ದಿನದ ಘೋಷವಾಕ್ಯವಾಗಿದ್ದು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪರಿಸರ ಸ್ನೇಹಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಕುರಿತು ಈಚೆಗೆ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ಸಂದರ್ಭ ಪ್ರತಿ ಸೋಮವಾರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹವಾನಿಯಂತ್ರಕಗಳನ್ನು ಬಳಸದೆ ಕಾರ್ಯ ನಿರ್ವಹಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಒಮ್ಮತ ಸೂಚಿಸಿದ್ದಾರೆ ಎಂದರು.

ವಾರಕ್ಕೊಂದು ದಿನ ಎಸಿ ಬಳಸದಿದ್ದರೆ ವಿದ್ಯುತ್ ಉಳಿತಾಯವಾಗುವುದರ ಜೊತೆಗೆ ಜಾಗತಿಕ ತಾಪಮಾನ ಕಡಿಮೆ ಮಾಡಲು ಸಹಕಾರಿಯಾಗುತ್ತದೆ. ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತದಿಂದ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.

ಪರಿಸರ ಸಂರಕ್ಷಣೆಯ ಮೊದಲ ಹೆಜ್ಜೆಯಾಗಿ ಈಗಾಗಲೇ ಸಮೂಹ ಸಾರಿಕೆ ಪರಿಕಲ್ಪನೆಯನ್ನು ಜಾರಿಗೊಳಿಸಲಾಗಿದ್ದು, ಪ್ರತಿ ಗುರುವಾರ ಸರ್ಕಾರಿ ಅಧಿಕಾರಿಗಳು ಸ್ವಂತ ಕಾರು ಹಾಗೂ ಇಲಾಖೆಯ ಕಾರುಗಳನ್ನು ಮನೆಯಲ್ಲಿಯೇ ಬಿಟ್ಟು, ಬಸ್‌ನಲ್ಲಿ ಪ್ರಯಾಣ ಮಾಡಲು ಸೂಚಿಸಲಾಗಿದೆ. ಇದಕ್ಕೆ ಅಧಿಕಾರಿಗಳಿಂದ ಉತ್ತಮ ಸ್ಪಂದನ ವ್ಯಕ್ತವಾಗಿದೆ ಎಂದರು.

ಅಧಿಕಾರಿಗಳು ಸಮೂಹ ಸಾರಿಗೆಯಲ್ಲಿ ಪ್ರಯಾಣಿಸುವುದರಿಂದ ವಾಯು ಮಾಲಿನ್ಯ ತಡೆಗಟ್ಟಬಹುದು. ಪರಿಸರಕ್ಕೆ ಕೈಲಾದ ಸೇವೆ ಮಾಡಬಹುದು. ಇದೇ ಮಾದರಿಯನ್ನು ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು, ಕಾರ್ಪೋರೇಟ್ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಿದರೆ ಪರಿಸರ ಸಂರಕ್ಷಣೆಗೆ ಕೈಜೋಡಿಸಬಹುದು. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ಅಗತ್ಯ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಪರಿಸರ ಸಂರಕ್ಷಣೆಯ ಉದ್ದೇಶದಿಂದ ಜಿಲ್ಲಾಡಳಿತ ಕೈಗೊಂಡಿರುವ ಪರಿಸರ ಸ್ನೇಹಿ ಕಾರ್ಯಕ್ರಮಗಳಿಂದ ನಿತ್ಯದ ಸರ್ಕಾರಿ ಕೆಲಸಗಳಿಗೆ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಡಿಸಿ ಹೇಳಿದರು.

ಸಮೂಹ ಸಾರಿಗೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT