ಉಡುಪಿ: ಕನ್ಯಾ ಮರಿಯಮ್ಮನವರ ಜನ್ಮದಿನವಾದ ಬುಧವಾರ ಮೊಂತಿ ಹಬ್ಬವನ್ನು ಜಿಲ್ಲೆಯಾದ್ಯಂತ ಕ್ರೈಸ್ತರು ಭಕ್ತಿ ಭಾವದಿಂದ ಸರಳವಾಗಿ ಆಚರಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಆಚರಣೆಗಳು ನಡೆದವು. ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಲಾಗಿದ್ದ ಹಿನ್ನೆಲೆಯಲ್ಲಿ ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಭಕ್ತರಿಗೆ ನೀಡಿ ಆಶೀರ್ವದಿಸಿದರು.
ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದರು. ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆಶೀರ್ವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಕುಟುಂಬ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಧರ್ಮಗುರುಗಳು ಪ್ರವಚನ ನೀಡಿದರು.
ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚರ್ಚ್‌ನ ಪ್ರಧಾನ ಧರ್ಮಗುರು ಚಾರ್ಲ್ಸ್ ಮಿನೇಜಸ್ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ವಲೇರಿಯನ್ ಮೆಂಡೊನ್ಸಾ, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ಡೆನಿಸ್ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚ್‌ನಲ್ಲಿ ಸ್ಟಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ಆಲ್ಬನ್ ಡಿಸೋಜಾ ನೇತೃತ್ವದಲ್ಲಿ ಬಲಿಪೂಜೆ ನಡೆದವು.
ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಮೂಡುಬೆಳ್ಳೆ ಸಮೀಪದ ಕುಂತಲ ನಗರ ಸಂತ ಅಂತೋನಿ ಚರ್ಚ್‌ನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.
ಬಲಿಪೂಜೆ ಬಳಿಕ ಧರ್ಮಗುರುಗಳು ಹೊಸ ಭತ್ತದ ತೆನೆಗಳನ್ನು ನೀಡಿ ಹರಸಿದರು. ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ವಿತರಿಸಲಾಯಿತು. ಇಗರ್ಜಿಯಿಂದ ತಂದ ಭತ್ತದ ತೆನೆಗಳನ್ನು ಕುಟುಂಬದ ಹಿರಿಯರು ಮನೆಯಲ್ಲಿ ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಭತ್ತದ ತೆನೆಗಳನ್ನು ಸುಲಿದು ಪಾಯಸ ಮಾಡಿ ಕುಟುಂಬ ಸದಸ್ಯರೊಂದಿಗೆ ಸವಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.