ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣ ಗುರು ಅಭಿವೃಧ್ದಿ ನಿಗಮ ಸ್ಥಾಪನೆ; ಸಚಿವ ವಿ.ಸುನೀಲ್ ಕುಮಾರ್ ಭರವಸೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಭರವಸೆ
Last Updated 23 ಆಗಸ್ಟ್ 2021, 14:58 IST
ಅಕ್ಷರ ಗಾತ್ರ

ಉಡುಪಿ: ಬಿಲ್ಲವ ಸಮುದಾಯದ ಅಭಿವೃದ್ಧಿಗೆ ನಾರಾಯಣ ಗುರು ಅಭಿವೃದ್ದಿ ನಿಗಮ ಆರಂಭಿಸುವ ಚಿಂತನೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಮೇಲು–ಕೀಳು, ಜಾತಿಯ ಸಂಘರ್ಷ, ಅಸಮಾನತೆಯ ಧ್ವನಿ ಇಂದಿಗೂ ಜೀವಂತವಾಗಿದೆ. ನಾರಾಯಣ ಗುರುಗಳ ತತ್ವ ಸಿದ್ಧಾಂತಗಳ ಮೂಲಕ ಸಮಾಜದಲ್ಲಿ ಪರಿವರ್ತನೆ ತರಬಹುದು. ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದರು.

ಬಿಲ್ಲವ ಸಮುದಾಯಕ್ಕೆ ಆರ್ಥಿಕವಾಗಿ ಶಕ್ತಿ ನೀಡಲು ನಾರಾಯಣ ಗುರು ಅಭಿವೃಧ್ದಿ ನಿಗಮ ಆರಂಭಿಸಿ, ಸಮುದಾಯದ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಶತಮಾನಗಳ ಕಾಲ ಸಾಮಾಜಿಕ ತುಳಿತಕ್ಕೆ ಒಳಗಾದವರನ್ನು ಹಾಗೂ ಅಸ್ಪೃಶ್ಯತೆಗೆ ಸಿಲುಕಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಪ್ರಯತ್ನವನ್ನು ಮಾಡಿದ ನಾರಾಯಣ ಗುರುಗಳು ರಕ್ತ ಕ್ರಾಂತಿಯಿಲ್ಲದೆ ಸಮಾಜದಲ್ಲಿ ಪರಿವರ್ತನೆ ತಂದರು ಎಂದರು.

ಇಂದಿಗೂ ನಾರಾಯಣ ಗುರುಗಳ ಭೋದನೆಗಳು ಪ್ರಸ್ತುತವಾಗಿದ್ದು, ಮುಜರಾಯಿ ಸಚಿವನಾಗಿದ್ದಾಗ ನಾರಾಯಣ ಗುರು ಮಂದಿರಗಳನ್ನು ದೇವಾಲಯಗಳ ಪಟ್ಟಿಗೆ ಸೇರ್ಪಡೆ ಮಾಡಿದ್ದೇನೆ. ಇದರಿಂದ ನಾರಾಯಣ ಗುರು ಮಂದಿರಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಗಲು ಸಾಧ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ‘ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚೆರಿತ್ರೆ ಶಾಲಾ ಪಠ್ಯದಲ್ಲಿ ಅಳವಡಿಕೆಯಾಗಬೇಕು. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿಕ್ಷಣ ಇಲಾಖೆಗೆ ಪ್ರಸ್ತಾವ ಸಲ್ಲಿಕೆಯಾಗಬೇಕು. ಅಸಮಾನತೆ ವಿರುದ್ಧದ ಹೋರಾಟಕ್ಕೆ ನಾರಾಯಣ ಗುರುಗಳ ಕೊಡುಗೆ ಅಪಾರವಾದುದು’ ಎಂದರು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್,ಎಸ್‌ಪಿ ಎನ್. ವಿಷ್ಣುವರ್ಧನ್, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಆನಂದ್ ಪೂಜಾರಿ ಇದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ವಂದಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT