ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರ್ಸಿಂಗ್: ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ- ಎನ್ ರವಿಕುಮಾರ್

Last Updated 11 ಮೇ 2022, 13:59 IST
ಅಕ್ಷರ ಗಾತ್ರ

ಉಡುಪಿ: ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜುಗಳಲ್ಲಿ ಮೂಲಸೌಕರ್ಯ ಹಾಗೂ ಉಪನ್ಯಾಸಕರ ಕೊರತೆ ಇದೆ ಎಂಬ ದೂರುಗಳಿವೆ. ನರ್ಸಿಂಗ್ ಕಾಲೇಜುಗಳಲ್ಲಿ ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ ಹೊರಡಿಸಿರುವ ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಪರಿಶೀಲಿಸಲು ವಿಶೇಷ ಜಂಟಿ ಸದನ ಸಮಿತಿ ರಚಿಸಲಾಗಿದೆ ಎಂದರು.

ನರ್ಸಿಂಗ್ ಕೌನ್ಸಿಲ್ ನಿಯಮಗಳ ಅನುಸಾರವೇ ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ನಡೆಯಬೇಕು. ಆದರೆ, ರಾಜ್ಯದಲ್ಲಿ ಬಹಳಷ್ಟು ಕಾಲೇಜುಗಳಲ್ಲಿ ಬೋಧಕರ ಕೊರತೆ ಇದೆ. ಪ್ರಯೋಗಾಲಯಗಳು ವ್ಯವಸ್ಥಿತವಾಗಿಲ್ಲ. ಪರಿಣಾಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಈ ಸಂಬಂಧ ಕಾಲೇಜುಗಳ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿಯನ್ನು ಸದನಕ್ಕೆ ಸಲ್ಲಿಸಲಾಗುವುದು ಎಂದು ರವಿಕುಮಾರ್ ಹೇಳಿದರು.

ನರ್ಸಿಂಗ್ ಕಾಲೇಜುಗಳಿಗೆ ಹೊರರಾಜ್ಯದ ವಿದ್ಯಾರ್ಥಿಗಳು ಹೆಚ್ಚಾಗಿ ಬರುತ್ತಿದ್ದು, ಕೆಲವರು ತರಗತಿಗೆ ಹಾಜರಾಗದೆ ನೇರವಾಗಿ ಪರೀಕ್ಷೆ ಬರೆದು ಪ್ರಮಾಣಪತ್ರ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಇದರಿಂದ ನರ್ಸಿಂಗ್ ವೃತ್ತಿ ಜೀವನದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲು ಕಷ್ಟ. ರೋಗಿಗಳು ತೊಂದರೆ ಎದುರಿಸಬೇಕಾಗುತ್ತದೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕುಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಹೊಸದಾಗಿ ನರ್ಸಿಂಗ್ ಕಾಲೇಜು ಪ್ರಾರಂಭಿಸುವಾಗ ಇಂತಿಷ್ಟು ಉಪನ್ಯಾಸಕರು, ಉತ್ತಮ ಪ್ರಯೋಗ ಶಾಲೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಇಂಡಿಯನ್ ನರ್ಸಿಂಗ್ ಕೌನ್ಸಿಲ್ ನಿಯಮ ವಿಧಿಸಿರುತ್ತದೆ. ಆದರೆ ಕೆಲವು ಕಾಲೇಜುಗಳಲ್ಲಿ ನಿಯಮ ಪರಿಪಾಲನೆ ಆಗುತ್ತಿಲ್ಲ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, ಕಳೆದ ಕೋವಿಡ್ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕೋವಿಡ್ ನಿಯಂತ್ರಣ ಸೇರಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಉತ್ತಮ ಸಹಕಾರ ನೀಡಿದ್ದಾರೆ. ನರ್ಸಿಂಗ್ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಮಿತಿ ನೀಡುವ ಸಲಹೆಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಮುನಿರಾಜು ಗೌಡ, ಡಾ.ಅವಿನಾಶ್ ಉಮೇಶ್ ಜಾಧವ್, ಹೆಚ್ಚುವರಿ ಕಾರ್ಯದರ್ಶಿ ಎಸ್.ನಿರ್ಮಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್‌.ವೀಣಾ, ಡಿಎಚ್‌ಒ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ನರ್ಸಿಂಗ್ ಕಾಲೇಜು ಪ್ರಾಂಶುಪಾಲರು, ನೋಡೆಲ್ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT