ಬುಧವಾರ, ಮಾರ್ಚ್ 22, 2023
31 °C

ಜೆಡಿಎಸ್‌ನಲ್ಲಿ ಮಾತ್ರ ಕುಟುಂಬ ಆಧಾರಿತ ಸಿಎಂ ಆಯ್ಕೆ: ಸುನಿಲ್ ಲೇವಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಬ್ರಾಹ್ಮಣರ ಜಾತಿ ಹೆಸರಿನಲ್ಲಿ ಕೀಳುಮಟ್ಟದಲ್ಲಿ ಮಾತನಾಡಿರುವುದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶೋಭೆ ತರುವುದಿಲ್ಲ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕುಟುಂಬ ಆಧಾರಿತ ಮುಖ್ಯಮಂತ್ರಿ ಆಯ್ಕೆ ನಡೆಯುವುದು ಜೆಡಿಎಸ್‌ ಪಕ್ಷದಲ್ಲಿ ಮಾತ್ರ. ಬಿಜೆಪಿಯಲ್ಲಿ ಕುಟುಂಬ ಹಾಗೂ ಜಾತಿ ಆಧಾರಿತ ಮುಖ್ಯಮಂತ್ರಿ ಆಯ್ಕೆ ನಡೆಯುವುದಿಲ್ಲ. ಪಕ್ಷನಿಷ್ಠೆ, ಅನುಭವ ಹಾಗೂ ಅರ್ಹತೆ ಇರುವ ಯಾವ ಸಮುದಾಯದವರು ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ರಾಜ್ಯದ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗಳನ್ನು ಎದುಸಿರಿಲ್ಲ. ಜಾತಿ ಆಧಾರಿತ ಹಾಗೂ ಸಮಾಜ ವಿಭಜಿಸುವ ಕಾರ್ಯವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿವೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ಹೇಳಿಕೆ ಪರೋಕ್ಷವಾಗಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ಸೂಚನೆಯಾಗಿದೆ. ಬಿಜೆಪಿ ಪಕ್ಷದಿಂದ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಮತ್ತೆ ಬಿಜೆಪಿ ತೆಕ್ಕೆಗೆ ಕರಾವಳಿ:

ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಅಂಗವಾಗಿ ಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ಸಮ್ಮೇಳನ ಪುತ್ತೂರಿನಲ್ಲಿ ನಡೆಯುತ್ತಿದ್ದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಭಾಗವಹಿಸುತ್ತಿದ್ದಾರೆ. ಶಾ ಭೇಟಿ ಹಿನ್ನೆಲೆಯಲ್ಲಿ ಸಹಜವಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಿಂದುತ್ವ ಹಾಗೂ ಅಭಿವೃದ್ಧಿಗೆ ಮತದಾರ ಮತ ಹಾಕುವ ವಿಶ್ವಾಸವಿದೆ ಎಂದರು.

ಸಾಮಾನ್ಯ ಪ್ರಕ್ರಿಯೆ:

ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತಿವರ್ಷ ಬಜೆಟ್ ಮಂಡನೆಗೂ ಮುನ್ನ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸುತ್ತವೆ. ಇದೊಂದು ಸಹಜ ಪ್ರಕ್ರಿಯೆ. ಕೆಆರ್‌ಸಿಯು ಸಾರ್ವಜನಿಕರ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳ ಅಭಿಪ್ರಾಯ ಪಡೆದು ವಿದ್ಯುತ್ ದರ ಏರಿಕೆಯ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಇವನ್ನೂ ಓದಿ: 

                

               

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು