ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾಥ ರೋಗಿಗಳ ಆರೈಕೆಗೆ ಅನಾಥಾಶ್ರಮ

ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್
Last Updated 29 ನವೆಂಬರ್ 2019, 15:30 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಆಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದಲ್ಲಿ ಅನಾಥಾಲಯ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅನಾಥ ರೋಗಿಗಳ ಆರೈಕೆ ಕುರಿತು ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ಜಿಲ್ಲಾ ಆಸ್ಪತ್ರೆಗೆ ಸಮಾಜ ಸೇವಕರು, ಸಾರ್ವಜನಿಕರು ಹೆಚ್ಚಾಗಿ ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಚಿಕಿತ್ಸೆ ನೀಡಲು ಸ್ಥಳಾವಕಾಶದ ಕೊರತೆ ಇದೆ ಎಂದು ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ತಿಳಿಸಿದರು.

ಆಸ್ಪತ್ರೆಯಲ್ಲಿ ಅನಾಥ ರೋಗಿಗಳನ್ನು ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ಚಿಕಿತ್ಸೆ ಬಳಿಕ ಅವರ ಪಾಲನೆಗೆ ಅನಾಥಾಲಯ ಆರಂಭಕ್ಕೆ ಜಿಲ್ಲಾ ಖನಿಜ ನಿಧಿಯಿಂದ ಅಗತ್ಯ ಆರ್ಥಿಕ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಮಹೇಶ್ವರ ರಾವ್‌ ತಿಳಿಸಿದರು.

ಜಿಲ್ಲಾ ಆಸ್ಪತ್ರೆ ಇದುವರೆಗೂ ತಾಲ್ಲೂಕು ಆಸ್ಪತ್ರೆಯ ಮಾದರಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಚರ್ಚಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಕೋರಿದರು.

ಈ ಸಂಬಂಧಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ಆಸ್ಪತ್ರೆಗೆ ದಾಖಲಾಗುತ್ತಿರುವ ಒಳ ರೋಗಿಗಳ ಸಂಖ್ಯೆ, ಚಿಕಿತ್ಸೆಗೆ ಬರುತ್ತಿರುವ ಹೊರರೋಗಿಗಳ ಸಂಖ್ಯೆಯ ಮಾಹಿತಿ ನೀಡುವಂತೆ ಜಿಲ್ಲಾ ಸರ್ಜನ್‌ಗೆ ಸೂಚಿಸಿದರು.

ಡೆಂಗಿ, ಮಲೇರಿಯಾ, ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಆಸ್ಪತ್ರೆಗಳಲ್ಲಿರುವ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಉಪಕರಣಗಳು ಸರಿಯಾಗಿ ಬಳಕೆಯಾಗುತ್ತಿವೆಯೇ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಎಂದರು.

ಅಂಗನವಾಡಿಗಳಲ್ಲಿರುವ ಸೌಲಭ್ಯಗಳು ಹಾಗೂ ಅವುಗಳ ಬಳಕೆಯ ಕುರಿತು ಪರಿಶೀಲಿಸಲು ವಾರಕೊಮ್ಮೆ, ಜಿಲ್ಲಾಮಟ್ಟದ ಅಧಿಕಾರಿಗಳು ಖುದ್ದು ಅಂಗನವಾಡಿಗಳಿಗೆ ಭೇಟಿ ನೀಡಬೇಕು. ಆಹಾರದ ಗುಣಮಟ್ಟ, ನೈರ್ಮಲ್ಯ ಕುರಿತು ವರದಿ ಸಲ್ಲಿಸಬೇಕು. ತಪಾಸಣೆ ವೇಳೆ ಅನುರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ಗ್ರೇಸಿ ಗೊನ್ಸಾಲ್ವಿಸ್ ಅವರಿಗೆ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿಯ ಫ್ಲೈಒವರ್ ಕಾಮಗಾರಿ ಅಪೂರ್ಣ, ಕೋಟೇಶ್ವರ ಅಂಡರ್ ಪಾಸ್ ಕಾಮಗಾರಿ ವಿಳಂಬದ ಕುರಿತು ಹೆದ್ದಾರಿ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಫಾಸ್ಟ್‌ಟ್ಯಾಗ್‌ಗಳು ನಿಗಧಿತ ಪ್ರಮಾಣದಲ್ಲಿ ದೊರೆಯದ ಕುರಿತು ಚರ್ಚಿಸುವುದಾಗಿ ತಿಳಿಸಿದರು.

ನಿಗಧಿಗಿಂತ ಹೆಚ್ಚಿನ ಸಾಮರ್ಥ್ಯದ ಎಂಜಿನ್ ಅಳವಡಿಸಿಕೊಂಡು ಮೀನುಗಾರಿಕೆ ನಡೆಸುತ್ತಿರುವ ದೂರುಗಳಿವೆ. ಬೆಳಕು ಮೀನುಗಾರಿಕೆ, ಬುಲ್ ಟ್ರಾಲಿಂಗ್ ಸೇರಿದಂತೆ ಕಾನೂನುಬಾಹಿರ ಮೀನುಗಾರಿಕೆ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮಹೇಶ್ವರ ರಾವ್ ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕನಿಷ್ಠ 50 ಗ್ರಾಮಗಳಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಬೇಕು. ಪ್ರಾಕೃತಿಕ ವಿಕೋಪದಿಂದ ಹಾನಿಯಾದ ರಸ್ತೆ ಹಾಗೂ ಕಟ್ಟಡಗಳ ದುರಸ್ತಿ ಕಾಮಗಾರಿ ಶೀಘ್ರ ಮುಗಿಸಬೇಕು ಎಂದು ತಿಳಿಸಿದರು.‌

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ವರ್ಷ ಜಿಲ್ಲೆಯ ಮಕ್ಕಳು ಉತ್ತಮ ಸಾಧನೆ ತೋರುವಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಟಿಇಟಿ ಪರೀಕ್ಷೆಯ ಬಗ್ಗೆ ಅಗತ್ಯ ತರಬೇತಿ ಕಾರ್ಯಕ್ರಮ ರೂಪಿಸಬೇಕು ಎಂದು ಡಿಡಿಪಿಐಗೆ ಮಹೇಶ್ವರ ರಾವ್ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಎಎಸ್ಪಿ ಕುಮಾರಚಂದ್ರ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT