ಬುಧವಾರ, ಮೇ 25, 2022
29 °C
15 ದಿನದೊಳಗೆ ತೆರವುಗೊಳಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

ಪಾರ್ಕಿಂಗ್ ಅತಿಕ್ರಮಿಸಿದ್ದರೆ ಟ್ರೇಡ್ ಲೈಸೆನ್ಸ್ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಗರದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ವಾಹನಗಳ ನಿಲುಗಡೆಗೆ ಜಾಗ ಮೀಸಲಿಟ್ಟು, ಕಟ್ಟಡ ನಿರ್ಮಾಣವಾದ ನಂತರ ಪಾರ್ಕಿಂಗ್‌ಗೆ ಮೀಸಲಿಟ್ಟ ಜಾಗವನ್ನು ಅತಿಕ್ರಮಿಸಿಕೊಂಡಿದ್ದರೆ, ಟ್ರೇಡ್ ಲೈಸೆನ್ಸ್‌ ರದ್ದುಗೊಳಿಸಿ ಎಂದು ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದರು.

ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳನ್ನು ನಿರ್ಮಿಸುವಾಗ ಪಾರ್ಕಿಂಗ್‌ಗೆ ಜಾಗ ಮೀಸಲಿರಿಸಿ, ನಿರ್ಮಾಣದ ನಂತರ ಸ್ಥಳವನ್ನು ಅತಿಕ್ರಮಿಸಿದ್ದರೆ ಅಂಥಹ ಕಟ್ಟಡ ಮಾಲೀಕರಿಗೆ ನೋಟಿಸ್‌ ನೀಡಬೇಕು. 15 ದಿನದಲ್ಲಿ ಪಾರ್ಕಿಂಗ್ ಜಾಗ ತೆರವುಗೊಳಿಸದಿದ್ದರೆ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಿ. ಅತಿಕ್ರಮಣ ಪ್ರದೇಶವನ್ನು ನಗರಸಭೆಯಿಂದ ತೆರವುಗೊಳಿಸಿ ಎಂದು ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ನಗರ ಪ್ರದೇಶಗಳ ವ್ಯಾಪ್ತಿಯ ರಸ್ತೆಗಳಲ್ಲಿರುವ ಪಾಟ್ ಹೋಲ್‌ಗಳನ್ನು ಮುಚ್ಚಬೇಕು. ಅನಿವಾರ್ಯವಿರುವ ಕಡೆಗಳಲ್ಲಿ ಮಾತ್ರ ಹಂಪ್‌ಗಳನ್ನು ನಿರ್ಮಿಸಬೇಕು. ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಹಂಪ್‌ಗಳನ್ನು ಹಾಕಬಾರದು ಎಂದು ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್‌ಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿ, ಗುಂಡಿಗಳನ್ನು ಮುಚ್ಚಬೇಕು. ಕೋಟ ಬಳಿಯ ಅಂಡರ್ ಪಾಸ್‌ ವಿಸ್ತರಿಸಿ ಏಕಕಾಲದಲ್ಲಿ ಎರಡು ವಾಹನಗಳು ಸಂಚರಿಸಲು ಸಾಧ್ಯವಾಗುವಂತೆ ಅನುವು ಮಾಡಿಕೊಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚಿಸಿದರು.

18 ವರ್ಷಕ್ಕಿಂತ ಕೆಳಗಿನವರು ರಸ್ತೆ ಸುರಕ್ಷತಾ ನಿಯಮಗಳನ್ನು ಮೀರಿ ವಾಹನಗಳನ್ನು ಚಲಾಯಿಸಿ ಹೆಚ್ಚು ಅಪಘಾತ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ಮಕ್ಕಳಿಗೆ ವಾಹನ ನೀಡಿದರೆ ಪೋಷಕರೂ ಜೈಲಿಗೆ ಹೋಗಬೇಕಾಗುತ್ತದೆ ಎಂದು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಕಲ್ಸಂಕ ಬಳಿ ಕೃಷ್ಣಮಠ ಪ್ರವೇಶಿಸುವ ಜಾಗದಲ್ಲಿರುವ ಸೇತುವೆಯನ್ನು ವಿಸ್ತಾರಗೊಳಿಸಿ ವಾಹನ ದಟ್ಟಣೆ ಕಡಿಮೆ ಮಾಡಬಹುದು. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯಂತೆ ಇಲಾಖೆಗಳು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಕಾಮಗಾರಿಗೆ ತಗಲುವ ಅಂದಾಜು ವೆಚ್ಚದ ವಿವರಗಳನ್ನು  ಶೀಘ್ರ ಸಲ್ಲಿಸುವಂತೆ ಡಿಸಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್‌ಪಿ ಕುಮಾರ್ ಚಂದ್ರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಪೌರಾಯುಕ್ತ ಉದಯ ಶೆಟ್ಟಿ,  ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.