ಬುಧವಾರ, ಏಪ್ರಿಲ್ 21, 2021
24 °C
ಹೆಣ್ಣು ಗಂಡು ಅನುಪಾತ ಸಮನಾಗಿರಲಿ:

ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸಿದವರಿಗೂ ಶಿಕ್ಷೆ: ನ್ಯಾಯಾಧೀಶೆ ಕಾವೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಭ್ರೂಣಲಿಂಗ ಪತ್ತೆ ಪ್ರಕರಣದಲ್ಲಿ ಮೊದಲ ಬಾರಿಯ ಅಪರಾಧಕ್ಕೆ 3 ವರ್ಷ ಜೈಲು ₹ 10,000 ದಂಡ, ಎರಡನೇ ಬಾರಿ ಅಪರಾಧ ಎಸಗಿದರೆ 5 ವರ್ಷಗಳವರೆಗೆ ಜೈಲು, ₹ 50,000 ದಂಡ ವಿಧಿಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಾವೇರಿ ಎಚ್ಚರಿಕೆ ನೀಡಿದರು.

ಬುಧವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಹಮ್ಮಿಕೊಂಡಿದ್ದ  ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಹಿಳೆ, ಆಕೆಯ ಪತಿ, ಅವರ ಸಂಬಧಿಕರು ಭ್ರೂಣಲಿಂಗ ಪತ್ತೆಗೆ ಒತ್ತಾಯಿಸಿದರೆ ಅವರೂ ಶಿಕ್ಷಗೆ ಒಳಪಡುತ್ತಾರೆ. ಜಾಗತಿಕವಾಗಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದು, ಗರ್ಭದಲ್ಲಿ ಇರುವ ಮಗು ಗಂಡು ಅಥವಾ ಹೆಣ್ಣು ಎಂದು ಪತ್ತೆ ಹಚ್ಚುವಂತಿಲ್ಲ. ಭ್ರೂಣದ ಲಿಂಗ ಪತ್ತೆ, ಭ್ರೂಣ ಲಿಂಗ ಆಯ್ಕೆ ಸಂಬಂಧ ಯಾವುದೇ ಜಾಹಿರಾತುಗಳನ್ನು ಕಾಯ್ದೆಯಲ್ಲಿ ನಿಷೇಧಿಸಲಾಗಿದೆ ಎಂದರು.

ಪ್ರಾಚೀನ ಕಾಲದಿಂದಲೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಏಡ್ಸ್ ಸೋಂಕಿತ ಗರ್ಭಿಣಿಗೆ ಗರ್ಭದಲ್ಲಿರುವಾಗಲೇ ಮಗುವಿಗೆ ಅಗತ್ಯ ಚಿಕಿತ್ಸೆ ದೊರೆಯಬೇಕು ಎಂದರು.

ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಚಿಕಿತ್ಸಾಲಯಗಳು, ಜೆನೆಟಿಕ್  ಕ್ಲಿನಿಕ್‌ಗಳು, ಪ್ರಯೋಗಾಲಯಗಳು ಸಂಬಂಧಪಟ್ಟ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಇಲ್ಲದಿದ್ದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನೂನಿನ ಅರಿವು, ಕಾನೂನಿನ ಉದ್ದೇಶ ಗೊತ್ತಿದ್ದರೆ ಹೆಣ್ಣು ಭ್ರೂಣ ಹತ್ಯೆ ಹಾಗೂ ಗಂಡು-ಹೆಣ್ಣಿನ ಲಿಂಗ ಅನುಪಾತ ಸಮನಾಗಲು ಸಾಧ್ಯ ಎಂದು ನ್ಯಾಯಾಧೀಶರು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ ಬಗ್ಗೆ ಪ್ರತಿ ವರ್ಷ ಅರಿವು ಮೂಡಿಸಲಾಗುತ್ತಿದೆ. ಆದರೂ ಉಡುಪಿಯಂತಹ ಬುದ್ಧಿವಂತರ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಗ್ರಾಮಗಳಲ್ಲಿ ಕಾನೂನು ಅರಿವು ಮೂಡಿಸುವಂತಹ ಕೆಲಸವನ್ನು ಆಶಾ ಕಾರ್ಯಕರ್ತೆಯರು ಮಾಡಬೇಕು ಎಂದರು.

ಹುಟ್ಟುವಂತಹ ಮಕ್ಕಳು ಆರೋಗ್ಯಯುತವಾಗಿರಬೇಕು, ಮಗುವಿನ ಅಂಗವಿಕಲತೆ ಪತ್ತೆಗೆ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಕೆಲವು ವೈದ್ಯರು ಭ್ರೂಣ ಲಿಂಗ ಪತ್ತೆಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ 73 ಸ್ಕ್ಯಾನಿಂಗ್ ಸೆಂಟರ್‌ಗಳಿದ್ದು, ಭ್ರೂಣ ಲಿಂಗ ಪತ್ತೆ ಮಾಡುವುದಿಲ್ಲ ಎಂದು ಕಡ್ಡಾಯವಾಗಿ ನಾಮಫಲಕಗಳನ್ನು ಹಾಕಬೇಕು. ಭ್ರೂಣ ಲಿಂಗ ಪತ್ತೆ ಮಾಹಿತಿ ಸಿಕ್ಕರೆ ಅದರ ಸಾಕ್ಷಾಧಾರಗಳ ಸಹಿತ ದೂರು ನೀಡಿದರೆ ಬಹುಮಾನ ನೀಡಲಾಗುವುದು ಎಂದರು.

ಜಿಲ್ಲಾ ಪಿಸಿ ಮತ್ತು ಪಿಎನ್‌ಡಿಟಿ ಸಲಹಾ ಸಮಿತಿಯ ಪ್ರಸೂತಿ ತಜ್ಞ ಡಾ.ಪ್ರತಾಪ್ ಕುಮಾರ್ ಮಾತನಾಡಿ, ಹಲವು ದಾರಿಯಲ್ಲಿ ಭ್ರೂಣಲಿಂಗ ಪತ್ತೆಗೆ ಪ್ರಯತ್ನಿಸುತ್ತಾರೆ. ವೈದ್ಯರು ಇಂತಹ ಕೃತ್ಯಕ್ಕೆ ಕೈಹಾಕಬಾರದು. ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿಸಬೇಕು ಎಂದರು.

ಶಿಶು ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಆಶಾ ಕಾರ್ಯಕರ್ತೆಯರು ಇದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.