ಶನಿವಾರ, ಅಕ್ಟೋಬರ್ 16, 2021
22 °C
ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ವಿಜ್ಞಾನ ಸಮುಚ್ಚಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ

ರಾಷ್ಟ್ರೀಯ ಶಿಕ್ಷಣ ನೀತಿ ಇಂದಿನ ಅಗತ್ಯ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: 21ನೇ ಶತಮಾನದ ಅಗತ್ಯತೆಗಳಿಗೆ ತಕ್ಕಂತೆ ಮಕ್ಕಳಿಗೆ ಶಿಕ್ಷಣ ನೀಡಬೇಕಾದ ಅನಿವಾರ್ಯತೆ ಇದ್ದು, ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ ಸಾಕಾರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಉಡುಪಿಯಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿಜ್ಞಾನ ಸಮುಚ್ಚಯಕ್ಕೆ ಶಿಲಾನ್ಯಾಸ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ‘ಮೆಕಾಲೆ ಶಿಕ್ಷಣ ಪದ್ಧತಿಯ ಪ್ರಕಾರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ಆಯಾ ವಿಭಾಗಗಳಿಗೆ ಸೀಮಿತವಾದ ವಿಷಯಗಳನ್ನು ಮಾತ್ರ ಕಲಿಯಬೇಕಿತ್ತು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಂಡರೆ ವಿದ್ಯಾರ್ಥಿಗಳ ಕಲಿಕೆಗೆ ನಿರ್ಬಂಧಗಳಿರುವುದಿಲ್ಲ. ಆಸಕ್ತಿ ಹೊಂದಿರುವ ವಿಷಯಗಳನ್ನು ಕಲಿಯಲು ಅವಕಾಶವಿದೆ ಎಂದರು.

ಭಾರತದ ಶಿಕ್ಷಣ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯೊಡ್ಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಆಶಯ ಹಾಗೂ ದಿಟ್ಟ ನಿರ್ಧಾರದಂತೆ ರಾಷ್ಟ್ರೀಯ ಶಿಕ್ಷಣ ನೀತಿ ರಚನೆಯಾಗಿದೆ. ಸುಶಿಕ್ಷಿತ, ಸುರಕ್ಷಿತ ಭಾರತ ನಿರ್ಮಾಣ ಎನ್‌ಇಪಿ ಆಯಶವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗಲಿದೆ ಎಂದು ಬೊಮ್ಮಾಯಿ ಹೇಳಿದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಧ್ಯಾನ ಹಾಗೂ ಜ್ಞಾನ ಅತಿ ಅವಶ್ಯವಾಗಿದ್ದು, ಪೂರ್ಣಪ್ರಜ್ಞ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಠದ ಪರಿಸರದಲ್ಲಿ ಧ್ಯಾನದೊಂದಿಗೆ ಜ್ಞಾನ ಸಂಪಾದಿಸುವ ಅವಕಾಶ ಸಿಕ್ಕಿದೆ. ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

21ನೇ ಶತಮಾನದಲ್ಲಿ ಭೂಮಿ, ಹಣಕ್ಕಿಂತ ಜ್ಞಾನಕ್ಕೆ ಹೆಚ್ಚು ಬೆಲೆ ಇದೆ. ಹಿಂದೆ ವಿಧಾನಸೌಧಕ್ಕೆ ಹೋಗುತ್ತಿದ್ದವರು ಈಗ ಇನ್‌ಫೋಸಿಸ್‌ನಂತಹ ಜ್ಞಾನಾಧಾರಿತ ಸಂಸ್ಥೆಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಶಕ್ತಿಯಿಂದ ಸಮಾಜ ಹಾಗೂ ದೇಶ ಬಹುದೊಡ್ಡ ಕೊಡುಗೆಗಳನ್ನು ನಿರೀಕ್ಷಿಸುತ್ತಿದ್ದು, ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬೊಮ್ಮಾಯಿ ಮನವಿ ಮಾಡಿದರು.

ಜ್ಞಾನವನ್ನು ಬಳಸಿಕೊಂಡು ದೇಶವನ್ನು ಕಾಡುತ್ತಿರುವ ಕೊರತೆ ನೀಗಿಸುಬೇಕು. ಸಾಧಕನಿಗೆ ಸಾವಿಲ್ಲ ಎಂಬ ವಿವೇಕಾನಂದರ ವಾಣಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅದಮಾರು ಮಠದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪ್ರಪಂಚ ಸುತ್ತಲೂ ಇಂಗ್ಲೀಷ್ ಭಾಷೆಯ ಅನಿವಾರ್ಯತೆ ಮನಗಂಡ ಹಿರಿಯ ಯತಿಗಳಾದ ವಿಬುಧೇಶ ತೀರ್ಥ ಸ್ವಾಮೀಜಿ, ದೇಶದಾದ್ಯಂತ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಸ್ಥಾಪಿಸಿ ಜ್ಞಾನ ಪ್ರಸಾರಕ್ಕೆ ಒತ್ತು ನೀಡಿದರು. ಅವರ ಆಶಯದಂತೆ ಮಠದ ಶಿಕ್ಷಣ ಸಂಸ್ಥೆಗಳು ಮುನ್ನಡೆಯುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಆದರ್ಶ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ದೇಶಕ ಡಾ.ಜಿ.ಎಸ್‌.ಚಂದ್ರಶೇಖರ್, ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕಾಲೇಜು ಪ್ರಾಂಶುಪಾಲೆ ಪ್ರತಿಮಾ ಬಾಳಿಗಾ, ಪ್ರಾಂಶುಪಾಲ ಡಾ.ರಾಘವೇಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.