ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಒಂದು ಬೇಕು, ಎರಡು ಸಾಕು: ಜನಸಂಖ್ಯೆಗೆ ಮಿತಿ ಇರಲಿ’

ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಶಾಸಕ ರಘುಪತಿ ಭಟ್
Last Updated 16 ಜುಲೈ 2021, 14:20 IST
ಅಕ್ಷರ ಗಾತ್ರ

ಉಡುಪಿ: ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸಾರ್ವಜನಿಕರು ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಳೆಯ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕ ಕೆ.ರಘುಪತಿ ಭಟ್‌ ಹೇಳಿದರು.

ಅಂಬಲಪಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಗತಿಸೌಧದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ. ಆರೋಗ್ಯ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ, ಮಲೇರಿಯಾ ಹಾಗೂ ಡೆಂಗಿ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಸೋಂಕಿನ ಮಧ್ಯೆ ಸಾಂಕ್ರಮಿಕ ರೋಗಗಳ ಭೀತಿ ಎದುರಾಗಿದೆ. ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ನೀರು ಶೇಖರಣೆ ಆಗದಂತೆ ನೋಡಿಕೊಳ್ಳಬೇಕು. ನಿಂತ ಮಳೆ ನೀರಿನಲ್ಲಿ ಮಲೇರಿಯಾ, ಡೆಂಗಿ, ಚಿಕನ್‍ಗೂನ್ಯಾ ದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಇದಕ್ಕೆ ಆಸ್ಪದ ಕೊಡಬಾರದು ಎಂದು ಶಾಸಕರು ಸಲಹೆ ನೀಡಿದರು.

ನೀರು ನಿಲ್ಲುವ ಜಾಗದಲ್ಲಿ ಕ್ರಿಮಿನಾಶಕ ಸಿಂಪರಣೆ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಜನಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಜನಸಂಖ್ಯೆ ನಿಯಂತ್ರಣದ ಬಗ್ಗೆ ಗಂಭೀರವಾಗಿ ಯೋಜಿಸಬೇಕಿದೆ. ‘ಒಂದು ಬೇಕು, ಎರಡು ಸಾಕು’ ಎಂಬ ನೀತಿಯನ್ನು ಪಾಲಿಸಿದರೆ ದೇಶದ ಜನಸಂಖ್ಯೆ ಏರಿಕೆಗೆ ನಿಯಂತ್ರಣ ಹಾಕಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜನಸಂಖ್ಯೆ ಹೆಚ್ಚಳದಿಂದ ದೇಶ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಬಡತನ, ಅರ್ಥಿಕ ಸಮಸ್ಯೆ, ಶಿಕ್ಷಣ ಸಮಸ್ಯೆ ಉಂಟಾಗುತ್ತದೆ. ಇದಕ್ಕೆ ಪರಿಹಾರವಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದರು.

ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಜನಸಂಖ್ಯಾ ದಿನಾಚರಣೆ, ಮಲೇರಿಯಾ ಹಾಗೂ ಡೆಂಗಿ ಮಾಸಾಚರಣೆಯ ಕರಪತ್ರ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಡಿಎಚ್‌ಒ ಡಾ.ನಾಗಭೂಷಣ್ ಉಡುಪ, ಜಿಲ್ಲಾ ವಾರ್ತಾಧಿಕಾರಿ ಬಿ. ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್‌, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್ ಉಪಾಧ್ಯಾಯ, ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT