ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ಪಿಯು ಪರೀಕ್ಷೆ ಸುರಕ್ಷತೆಗೆ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್‌

ಪರೀಕ್ಷಾ ಕೇಂದ್ರಗಳಿಗೆ ಬರಲು ಉಚಿತ ಬಸ್‌ ವ್ಯವಸ್ಥೆ
Last Updated 11 ಜೂನ್ 2020, 12:36 IST
ಅಕ್ಷರ ಗಾತ್ರ

ಉಡುಪಿ: ಜೂನ್ 18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಆಯೋಜನೆಗೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಗೆ ಹಾಜರಾಗಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಕಾರಣದಿಂದ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಜೂನ್ 18ರಂದು ನಡೆಯುತ್ತಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಹೆಚ್ಚುವರಿಯಾಗಿ 2 ಬ್ಲಾಕ್‌ಗಳನ್ನು ಗುರುತಿಸಲಾಗಿದೆ ಎಂದರು.

13,547 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಹೊರ ಜಿಲ್ಲೆಗಳಿಂದ 160 ಮತ್ತು ಹೊರ ರಾಜ್ಯದಿಂದ ಒಬ್ಬರು ವಿದ್ಯಾರ್ಥಿ ಆಗಮಿಸಲಿದ್ದಾರೆ. ಜಿಲ್ಲೆಯ 1,344 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆ ಪತ್ರಿಕೆ ವಿತರಿಸಲು 8 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ನೇಮಿಸಿ, ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಕೆಎಸ್‌ಆರ್‌ಟಿಸಿ ಉಚಿತ ಬಸ್‌ ವ್ಯವಸ್ಥೆ ಮಾಡುತ್ತಿದ್ದು, ಸ್ವಂತ ವಾಹನದಲ್ಲಿ ಬರುವವರ ಸಂಖ್ಯೆ, ಖಾಸಗಿ ವಾಹನದಲ್ಲಿ ಬರುವವರು ಹಾಗೂ ಎಷ್ಟು ವಿದ್ಯಾರ್ಥಿಗಳಿಗೆ ಬಸ್ ಅವಶ್ಯಕತೆ ಇದೆ ಎಂಬ ಮಾಹಿತಿ ಸಂಗ್ರಹಿಸಿ, ಅಗತ್ಯವಿರುವೆಡೆ ಬಸ್ ವ್ಯವಸ್ಥೆ ಮಾಡಬೇಕು. ಇದಕ್ಕೆ ರೂಟ್ ಮ್ಯಾಪ್ ಸಿದ್ಧಪಡಿಸಬೇಕು. ಯಾವ ವಿದ್ಯಾರ್ಥಿಯೂ ಬಸ್‌ ವ್ಯವಸ್ಥೆ ಇಲ್ಲದ ಕಾರಣಕ್ಕೆ ಪರೀಕ್ಷೆಗೆ ಗೈರಾಗದಂತೆ ಎಚ್ಚರವಹಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಪಿಯು ಇಲಾಖೆ ಸಿದ್ಧಪಡಿಸುವ ರೂಟ್‌ಮ್ಯಾಪ್‌ಗೆ ಅನುಗುಣವಾಗಿ ನಿಗದಿತ ಸಂಖ್ಯೆಯ ಬಸ್‌ಗಳನ್ನು ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳನ್ನು ಕರೆತರುವಾಗ ಬಸ್‌ಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡುವ ಮುನ್ನ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಬೇಕು. ಮಾಸ್ಕ್ ಧರಿಸುವುದು ಕಡ್ಡಾಯ, ಜ್ವರ, ಶೀತ ಇರುವ ಹಾಗೂ ಕಂಟೋನ್ಮೆಂಟ್‌ ಪ್ರದೇಶದಿಂದ ಬರುವವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಭಗವಂತ ಕಟ್ಟೀಮನಿ, ತಹಸೀಲ್ದಾರ್‌ಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT