ಉಡುಪಿ: ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ನ್ಯಾಯಾಂಗ ಹಾಗೂ ಶಾಸಕಾಂಗದ ನಿಯಮಾವಳಿಗೆ ವಿರುದ್ಧ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.
ಯಾವುದೇ ವ್ತಕ್ತಿಯ ವಿರುದ್ದ ನ್ಯಾಯಾಲಯ ತೀರ್ಪು ನೀಡಿದರೆ ಅಥವಾ ಜೈಲು ಶಿಕ್ಷೆಗೆ ಗುರಿಪಡಿಸಿದರೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ಇರುತ್ತದೆ. ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ನೀಡಿರುವ ನ್ಯಾಯಾಲಯವೇ ಶಿಕ್ಷೆಯ ಆದೇಶ ಪ್ರತಿ ಕೈಸೇರಿದ 30 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಬಹುದು. ಅಲ್ಲಿಯವರೆಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ಆದೇಶ ನೀಡಿದ್ದರೂ ವಿರುದ್ಧವಾಗಿ ನಡೆದುಕೊಳ್ಳಲಾಗಿದೆ.
ನ್ಯಾಯಾಲಯದ ಆದೇಶದ ಪ್ರತಿ ಲಭ್ಯವಾಗಿ 30 ದಿನ ಕಳೆದು ಮೇಲ್ಮನವಿ ಸಲ್ಲಿಸದಿದ್ದರೆ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಬಹುದು. ಆದರೆ, ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ದ್ವೇಷ, ಅನೈತಿಕ ರಾಜಕಾರಣದ ಮೂಲಕ ಪ್ರಜಾಪ್ರಭತ್ವದ ಕಗ್ಗೊಲೆ ಮಾಡಿದೆ ಎಂದು ಖಂಡಿಸಿದ್ದಾರೆ.
ರಾಹುಲ್ ಬಾಲಿಶ ಹೇಳಿಕೆಗೆ ತಕ್ಕ ಶಾಸ್ತಿ
2019ರ ಲೋಕಸಭಾ ಚುನಾವಣೆ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೋದಿ ಉಪನಾಮ ಹೊಂದಿರುವ ಎಲ್ಲರೂ ಕಳ್ಳರು ಎಂಬ ಹೇಳಿಕೆಗೆ ಸೂರತ್ ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿದ್ದು ರಾಹುಲ್ ಗಾಂಧಿಯ ಅಪ್ರಬುದ್ಧ ಬಾಲಿಶ ಹೇಳಿಕೆಗೆ ಮತ್ತು ಹಿಂದುಳಿದ ವರ್ಗಗಳ ನಾಯಕರನ್ನು ತೆಗಳುವ ನಿಲುವಿಗೆ ತಕ್ಕ ಶಾಸ್ತಿ ಮಾಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
65 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ನೀಡದೆ ಸುಳ್ಳು ಭರವಸೆಗಳನ್ನು ನೀಡಿ ಮತಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷವು ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿಯಾಗಿದೆ. ದೇಶದಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ಮತ್ತೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.