ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 25 ವರ್ಷಗಳ ಅಭಿವೃದ್ಧಿ ನೀಲನಕ್ಷೆ ಅಗತ್ಯ

ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್
Last Updated 25 ಸೆಪ್ಟೆಂಬರ್ 2022, 16:17 IST
ಅಕ್ಷರ ಗಾತ್ರ

ಬೈಂದೂರು: ಜಿಲ್ಲೆಯ ಆಧ್ಯಾತ್ಮಿಕ, ಧಾರ್ಮಿಕ ತಳಗಟ್ಟಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಸ ಪೀಳಿಗೆಗೆ ಪರಿಚಯಿಸಿ ರಾಷ್ಟ್ರಮಟ್ಟಕ್ಕೆ ವಿಸ್ತರಿಸಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ತಾಲ್ಲೂಕು ಆಡಳಿತದ ವತಿಯಿಂದ ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

1997ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ಅಭಿವೃದ್ದಿಗೆ ಹೋಲಿಸಿದರೆ ಉಡುಪಿ ಜಿಲ್ಲೆ 20 ವರ್ಷ ಮುಂದಿದೆ. ಉಡುಪಿ ಜಿಲ್ಲೆಯಲ್ಲಿ ಸ್ಟಾಂಡ್ ಅಪ್‌ ಇಂಡಿಯಾ ಯೋಜನೆಯಡಿ ಹೊಸ ಆವಿಷ್ಕಾರಗಳು, ಹೊಸ ಉದ್ಯಮಗಳು ಸ್ಥಾಪನೆಯಾಗಬೇಕು. ಮುಂದಿನ 25 ವರ್ಷಗಳ ಅಭಿವೃದ್ಧಿ ನಿಟ್ಟಿನಲ್ಲಿ ನೀಲನಕಾಶೆ ತಯಾರಾಗಬೇಕು ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಭೇಧ ಮರೆತು ಎಲ್ಲರೂ ಒಂದಾಗಬೇಕು. ಉಡುಪಿ ಜಿಲ್ಲೆಗೊಂದು ವಿಮಾನ ನಿಲ್ದಾಣ, ಸರ್ಕಾರಿ ವೈದ್ಯಕೀಯ ಕಾಲೇಜು, ಕೃಷಿ ಕಾಲೇಜು, ಇಎಸ್‍ಐ ಆಸ್ಪತ್ರೆ, ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ₹ 2,000ಕೋಟಿ ಅನುದಾನವನ್ನು ತಂದು ಅನುಷ್ಠಾನಗೊಳಿಸಲಾಗುತ್ತಿದೆ. ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ, ಉಡುಪಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ ಎಂದರು.

ಜಿಲ್ಲೆಗೆ ಭೇಟಿನೀಡುತ್ತಿರುವ ಭಕ್ತರು, ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ಪ್ರವಾಸೋದ್ಯಮ ಸ್ಥಳಗಳಲ್ಲಿ ಮೂಲಸೌಲಭ್ಯಗಳು ಮತ್ತಷ್ಟು ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ ಎಂದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಿಥುನ್ ಆರ್.ಹೆಗ್ಡೆ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಕಾರಿ ಎಚ್‌.ಪ್ರಸನ್ನ, ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಬೈಂದೂರು ತಹಸೀಲ್ದಾರ್ ಶ್ರೀಕಾಂತ ಎಸ್. ಹೆಗ್ಡೆ, ತಾಲ್ಲೂಕು ಪಂಚಾಯಿತಿ ಇಒ ಭಾರತಿ ಉಪಸ್ಥಿತರಿದ್ದರು.

ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ಸ್ವಾಗತಿಸಿದರು. ವಿಶ್ವನಾಥ ಶೆಟ್ಟಿ, ಪಿ.ಸುಧಾಕರ ಕಾರ್ಯಕ್ರಮ ನಿರೂಪಿಸಿದರು. ಕರುಣಾಕರ ಶೆಟ್ಟಿ ವಂದಿಸಿದರು. ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT