ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾಲ: ಉಡುಪಿ ಪ್ರಥಮ ಸ್ಥಾನಕ್ಕೇರಬೇಕು

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ
Last Updated 28 ಆಗಸ್ಟ್ 2019, 15:21 IST
ಅಕ್ಷರ ಗಾತ್ರ

ಉಡುಪಿ: ಮಾದರಿ ಜಿಲ್ಲೆ ಎನಿಸಿಕೊಂಡಿರುವ ಉಡುಪಿಯಲ್ಲಿ ‘ಸಕಾಲ’ ಅರ್ಜಿ ವಿಲೇವಾರಿ ವಿಳಂಬ ಉತ್ತಮ ಬೆಳವಣಿಗೆ ಅಲ್ಲ. ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬುಧವಾರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ‘ಸಕಾಲ’ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಉಡುಪಿ ಜುಲೈನಿಂದ ಆಗಸ್ಟ್‌ವರೆಗೂ ಒಂದನೇ ಸ್ಥಾನ, ಅರ್ಜಿ ಸ್ವೀಕರಿಸುವುದರಲ್ಲಿ 10ನೇ ಸ್ಥಾನ ಹಾಗೂ ಒಟ್ಟಾರೆ ಸಾಧನೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನದಲ್ಲಿದೆ. ಜಿಲ್ಲೆ ಒಂದನೇ ಸ್ಥಾನಕ್ಕೇರಲು ಎಲ್ಲ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು ಎಂದರು.

ಜುಲೈ ತಿಂಗಳಲ್ಲಿ ಜಿಲ್ಲೆಯ 158 ಗ್ರಾಮ ಪಂಚಾಯತ್‌ಗಳಲ್ಲಿ ಕೇವಲ 400 ಸೇವೆಗಳನ್ನು ಸಕಾಲದಲ್ಲಿ ನೀಡಲಾಗಿದೆ. ಇದು ಅತ್ಯಂತ ಕಡಿಮೆಯಾಗಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಗ್ರಾಮ ಪಂಚಾಯತ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.

ಸಕಾಲದಲ್ಲಿ ಗುರುತಿಸಲ್ಪಟ್ಟ ಸೇವೆಗಳನ್ನು ಸಕಾಲದ ಮೂಲಕ ಬಿಟ್ಟು ನೇರವಾಗಿ ನೀಡುತ್ತಿರುವುದು ಕಂಡು ಬರುತ್ತಿದೆ. ನೇರವಾಗಿ ಅರ್ಜಿ ಸ್ವೀಕರಿಸಿ, ವಿಲೇವಾರಿ ಮಾಡಿದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾಲಮಿತಿಯಲ್ಲಿ ಅರ್ಜಿ ಇತ್ಯರ್ಥಗೊಳಿಸುವ ಅಧಿಕಾರಿಗಳನ್ನು ಗುರುತಿಸಿ ಪ್ರಶಂಸಾ ಪತ್ರ ನೀಡಲಾಗುವುದು. ಸಕಾಲ ವಿಲೇವಾರಿಯಲ್ಲಿ ಮೊದಲ ಸ್ಥಾನ ಪಡೆದ ಬಳಿಕ, ಸಾರ್ವಜನಿಕರ ಮನೆ ಬಾಗಿಲಿಗೆ ವಿವಿಧ ಸೇವೆಗಳನ್ನು ತಲಪಿಸುವ ಚಿಂತನೆ ಇದೆ ಎಂದರು.

ದೆಹಲಿಯಲ್ಲಿ ಕೆಲವು ಸೇವೆಗಳನ್ನು ಜನರ ಮನೆ ಬಾಗಿಲಿಗೆ ಒದಗಿಸಲಾಗುತ್ತಿದ್ದು, ಅದೇ ಮಾದರಿಯನ್ನು ಜಿಲ್ಲೆಯಲ್ಲಿ ಅಳವಡಿಸಿಕೊಳ್ಳುವ ಚಿಂತನೆ ಇದೆ. ಇದಕ್ಕಿಂತ ಮೊದಲು ಎಲ್ಲಾ ಇಲಾಖೆಗಳು ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಮುತುವರ್ಜಿ ವಹಿಸಬೇಕು ಎಂದರು.

ಕಾಲ ಮಿತಿಯೊಳಗೆ ಸಕಾಲ ಅರ್ಜಿಗಳನ್ನು ವಿಲೇವಾರಿ ಮಾಡಿದ 29 ಇಲಾಖೆಗಳ 160 ಅಧಿಕಾರಿಗಳಿಗೆ ಪ್ರಶಂಸಾ ಪತ್ರವನ್ನು ವಿತರಣೆ ಮಾಡಲಾಯಿತು.

ಕುಂದಾಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ್, ಸಕಾಲ ಕನ್ಸಲ್ಟೆಂಟ್‌ ಚೇತನ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT