ಶನಿವಾರ, ಆಗಸ್ಟ್ 13, 2022
25 °C
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ

ಸೇವಾ ಮನೋಭಾವದಿಂದ ಸದೃಢ ಸಂಘಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕಾರ್ಯ ತತ್ಪರತೆ, ತ್ಯಾಗ ಮನೋಭಾವದಿಂದ ಸಂಘಟನೆ ಸದೃಢಗೊಳ್ಳಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.

ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಸಮಾವೇಶ ಹಾಗೂ ಸೇವಾ ನಿವೃತ್ತಿಗೊಳ್ಳುತ್ತಿರುವ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು ರಾಜ್ಯಮಟ್ಟದ ಸಭೆಯಲ್ಲಿ ಚರ್ಚಿಸಿ ಪರಿಹರಿಸುವಲ್ಲಿ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ ಶ್ರಮ ಹೆಚ್ಚಿದೆ. ಜಿಲ್ಲೆ ಮಾತ್ರವಲ್ಲ, ರಾಜ್ಯದ ಎಲ್ಲ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸಮರ್ಥವಾಗಿ ವಾದ ಮಂಡನೆ ಮಾಡುತ್ತಿದ್ದ ಶೇರಿಗಾರ್ ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ್ದು, ಸೇವಾ ಮನೋಭಾವದ ಮೂಲಕ ನೌಕರರನ್ನು ಒಗ್ಗೂಡಿಸುವ ಹಾಗೂ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡಿದ್ದಾರೆ. ಪ್ರತಿಫಲವಾಗಿ 3 ಬಾರಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ ಎಂದು ಶ್ಲಾಘಿಸಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮೂಲಕ ಸುಬ್ರಹ್ಮಣ್ಯ ಶೇರಿಗಾರ್ ಹಲವು ಸಮಾಜಮುಖಿ ಕಾರ್ಯ ಮಾಡಿದ್ದಾರೆ. ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದಾರೆ. ನೌಕರರ ಕಾರ್ಯದೊತ್ತಡ ಅರಿತು ವಿಶೇಷ ಕಾರ್ಯಾಗಾರ ಆಯೋಜಿಸಿದ್ದಾರೆ. ನೌಕರರ ಅಗತ್ಯಗಳಿಗೆ ಸ್ಪಂದಿಸಿದ್ದಾರೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸುಬ್ರಹ್ಮಣ್ಯ ಶೇರಿಗಾರ್ ‘ವೃತ್ತಿ ಜೀವನ ಹಾಗೂ ಸರ್ಕಾರಿ ನೌಕರರ ಸಂಘಟನೆಗೆ ಹಲವರು ಸಹಕರಿಸಿದ್ದಾರೆ. ಸಂಘಟನೆಯ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಮಿಷನ್ ಆಸ್ಪತ್ರೆ ಸರ್ಕಲ್ ಬಳಿಯಿಂದ ತೆರೆದ ಜೀಪಿನಲ್ಲಿ ಸುಬ್ರಹ್ಮಣ್ಯ ಶೇರಿಗಾರ್ ಅವರನ್ನು ಕಾರ್ಯಕ್ರಮದ ಸಭಾಂಗಣಕ್ಕೆ ಕರೆತರಲಾಯಿತು. ವಿವಿಧ ಸಂಘ ಸಂಸ್ಥೆಗಳಿಂದ ಸುಬ್ರಹ್ಮಣ್ಯ ಶೇರಿಗಾರ್ ದಂಪತಿಯನ್ನು ಸನ್ಮಾನಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಆಶಯ ನುಡಿಗಳನ್ನಾಡಿದರು. ಸುಬ್ರಹ್ಮಣ್ಯ ಶೇರಿಗಾರ್ ಅವರ ಪತ್ನಿ ಸಜನಿ ಸುಬ್ರಹ್ಮಣ್ಯ , ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳಾದ ವೆಂಕಟೇಶಯ್ಯ, ಮಲ್ಲಿಕಾರ್ಜುನ ಬಳ್ಳಾರಿ, ರುದ್ರಪ್ಪ, ಬಸವರಾಜು, ರವಿ, ಮೋಹನ್ ಕುಮಾರ್, ಹರ್ಷ, ಸತೀಶ್ ಸಿದ್ದರಾಮಣ್ಣ ಇದ್ದರು.

ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕೃಷ್ಣ, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ, ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶರೀಫ ಮ.ರೋಣ, ಕಾರ್ಕಳ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ, ಹೆಬ್ರಿ ತಾಲ್ಲೂಕು ಅಧ್ಯಕ್ಷ ಹರೀಶ್ ಪೂಜಾರಿ, ಕಾಪು ತಾಲ್ಲೂಕು ಅಧ್ಯಕ್ಷ ನಾಗೇಶ್ ಬಿಲ್ಲವ ಇದ್ದರು.

ಅಭಿನಂದನಾ ಸಮಿತಿ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ಅಭಿನಂದನಾ ಸಮಿತಿ ಸದಸ್ಯ ಗಣಪತಿ ಹೋಬಳಿದಾರ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.