ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸಂಘಟಿಸಿದರೆ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
Last Updated 14 ನವೆಂಬರ್ 2020, 14:57 IST
ಅಕ್ಷರ ಗಾತ್ರ

ಉಡುಪಿ: ಸಮಸ್ಯೆ ಹಾಗೂ ಸವಾಲುಗಳನ್ನು ಬಗೆಹರಿಸಿಕೊಂಡು ತಳಮಟ್ಟದಿಂದ ಪಕ್ಷ ಸಂಘಟಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಪಕ್ಷದಲ್ಲಿ ಸಮಸ್ಯೆ ಹಾಗೂ ಸವಾಲುಗಳಿವೆ. ಕಾರ್ಯಕರ್ತರ ಆಧಾರಿತ ಪಕ್ಷ ಸಂಘಟನೆಗೆ ಒತ್ತು ನೀಡಿ ಹೆಚ್ಚು ಮಂದಿ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡಲಾಗುವುದು. ಸಂಘಟನೆಗೆ ಒತ್ತು ಕೊಟ್ಟರೆ ಕಾಂಗ್ರೆಸ್‍ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿದೆ. ಇದಕ್ಕೆ ಕಾರ್ಯಕರ್ತರು ಒಗ್ಗಟ್ಟಿನಲ್ಲಿ ದುಡಿಯಬೇಕು ಎಂದರು.

ನೆಹರೂ, ಗಾಂಧೀಜಿ, ಅಂಬೇಡ್ಕರ್ ಅವರ ಮೌಲ್ಯಗಳು ನಶಿಸುತ್ತಿದೆ. ಮಹನೀಯರ ಆದರ್ಶ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಮುಟ್ಟಿಸುವ ಕೆಲಸ ಮಾಡಬೇಕು. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖಂಡರು ಹಾಗೂ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನವಿರೋಧಿ ಆಡಳಿತ ಹೆಚ್ಚಾಗಿದೆ. ಕರಾವಳಿಯ ಬ್ಯಾಂಕಿಂಗ್ ಕ್ಷೇತ್ರದ ಅಸ್ತಿತ್ವಕ್ಕೆ ಪೆಟ್ಟು ಬಿದ್ದಿದೆ. ನಿರುದ್ಯೋಗ ಹೆಚ್ಚಾಗಿದೆ. ಬಿಜೆಪಿಯ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಪಿಸಿಸಿ ಕಾರ್ಯದರ್ಶಿ ಸುನೀಲ್‌, ಎಐಸಿಸಿ ಸದಸ್ಯ ಪಿ.ವಿ.ಮೋಹನ್ ಪಕ್ಷ ಸಂಘಟನೆ ಕುರಿತು ಸಲಹೆಗಳನ್ನು ನೀಡಿದರು.

ನೆಹರೂ ಅವರ ಜನ್ಮದಿನದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಮುಖಂಡರಾದ ಯತೀಶ್‌ ಕರ್ಕೆರಾ, ದಿನೇಶ್ ಪುತ್ರನ್, ಗೀತಾ ವಾಗ್ಲೆ, ರೋಶನಿ ಒಲಿವೆರಾ, ಬಾಲಕೃಷ್ಣ ಪೂಜಾರಿ ಮಂಜುನಾಥ ಪೂಜಾರಿ, ಸೌರಭ ಬಲ್ಲಾಳ್, ನವೀನ್‍ಚಂದ್ರ ಸುವರ್ಣ, ಸತೀಶ್ ಅಮೀನ್ ಪಡುಕರೆ, ಸದಾಶಿವ ದೇವಾಡಿಗ ಇದ್ದರು. ಪಕ್ಷದ ಉಪಾಧ್ಯಕ್ಷ ರಾಜು ಪೂಜಾರಿ ಸ್ವಾಗತಿಸಿದರು. ಜ್ಯೋತಿ ಹೆಬ್ಬಾರ್ ವಂದಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT