ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಥೆನಾಲ್ ಪಾಲಿಸಿ ಜಾರಿಗೆ ನಿರ್ಧಾರ: ಪಾಟೀಲ ಮುನೇನಕೊಪ್ಪ

ಅಧಿಕಾರಿಗಳ ಸಭೆ ಹಾಗೂ ನೇಕಾರರ ಕುಂದು ಕೊರತೆ ಆಲಿಸಿದ ಸಚಿವ
Last Updated 31 ಡಿಸೆಂಬರ್ 2021, 13:16 IST
ಅಕ್ಷರ ಗಾತ್ರ

ಉಡುಪಿ: ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಮಾಡುವ ಸಂಬಂಧ ಎಥೆನಾಲ್ ಪಾಲಿಸಿ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಹೇಳಿದರು.

ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ನೇಕಾರರ ಕುಂದು ಕೊರತೆ ಆಲಿಸಿ ಮಾತನಾಡಿದರು.

ಕಬ್ಬು, ಭತ್ತ ಮತ್ತು ಗೋವಿನ ಜೋಳದಿಂದ ಎಥೆನಾಲ್ ಉತ್ಪಾದನೆ ಸಾಧ್ಯವಿದ್ದು, ಈಗಾಗಲೇ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಉತ್ಪಾದಿಸುತ್ತಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ರಾಜ್ಯದಿಂದ ಸಂಶೋಧಕರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದರು.

ರಾಜ್ಯದಲ್ಲಿ ಎಥೆನಾಲ್ ಉತ್ಪಾದಕರಿಗೆ ಸಬ್ಸಿಡಿ ಹಾಗೂ ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದ್ದು, ರೈತರಿಗೆ ಲಾಭವಾಗಲಿದೆ. ಸಕ್ಕರೆ ಉದ್ದಿಮೆಗಳ ಪುನಶ್ಚೇತನ ಸಾಧ್ಯವಾಗಲಿದೆ ಎಂದರು.

ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್‌ ಅನ್ನು ಸರ್ಕಾರವೇ ಖರೀದಿಸಿ ಪೆಟ್ರೋಲಿಯಂ ಕಂಪನಿಗಳಿಗೆ ಮಾರಾಟ ಮಾಡಲಿದೆ. ಎಥೆನಾಲ್ ಉತ್ಪಾದಿಸಲು ಅನುಮತಿ ಕೋರುವ ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ನೀಡಲಾಗುವುದು. ಸಕ್ಕರೆ ಕಾರ್ಖಾನೆಗಳು ಸಕ್ಕರೆಯೊಂದಿಗೆ ಉಪ ಉತ್ಪನ್ನಗಳನ್ನು ತಯಾರಿಸಿ, ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಚಿವ ಶಂಕರ ಪಾಟೀಲ ಹೇಳಿದರು.

ಉಡುಪಿಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆರಂಭ ಸಂಬಂಧ ಕಾರ್ಖಾನೆಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿ, ಕಾರ್ಖಾನೆ ಆರಂಭಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕೈಮಗ್ಗ ಮತ್ತು ಜವಳಿ ಇಲಾಖೆ ಹೆಚ್ಚುವರಿ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ಶ್ರೀಧರ ನಾಯ್ಕ್, ಜಿಲ್ಲಾ ಸಹಾಯಕ ನಿರ್ದೇಶಕ ಅಶೋಕ್, ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ಶಿವಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT