ರಾಜ್ಯದಲ್ಲಿ ಶೀಘ್ರ ಭತ್ತ ಖರೀದಿ ಕೇಂದ್ರ ಆರಂಭ: ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯ ಭತ್ತ ಬೆಳೆಗಾರರ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಜಿಲ್ಲೆಯ ರೈತ ಮುಖಂಡರು ಗುರುವಾರ ಸಂಸದರ ಕಚೇರಿಯಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಹವಾಲು ಸಲ್ಲಿಸಿದರು.
ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು, ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಳೆಯಲಾಗುವ ಎಂಒ 4 ಭತ್ತದ ತಳಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತ ಮುಖಂಡರು ಮನವಿ ಮಾಡಿದ್ದಾರೆ. ಈ ಸಂಬಂಧ ರೈತರ ಸಮಸ್ಯೆ ಬಗೆಹರಿಸುವಂತೆ ರಾಜ್ಯದ ಕೃಷಿ ಸಚಿವರಿಗೆ ವಿನಂತಿಸಿದ್ದು, ಕೇಂದ್ರದಿಂದ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ ಎಂದರು.
ಕೇಂದ್ರ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹ 1,940 ಬೆಂಬಲ ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ತಕ್ಷಣ ಭತ್ತ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಬೇಕು ಎಂದು ತಿಳಿಸಿದ್ದೇನೆ ಎಂದರು.
ರಾಜ್ಯದ ವಿವಿಧ ಭಾಗಗಳಲ್ಲಿ ಭತ್ತದ ಕಟಾವು ಬೇರೆ ಬೇರೆ ಸಮಯದಲ್ಲಿ ನಡೆಯುತ್ತದೆ. ಕರಾವಳಿಯಲ್ಲಿ ನವೆಂಬರ್, ಡಿಸೆಂಬರ್ ಹಾಗೂ ಜನವರಿವರೆಗೆ ಭತ್ತ ಕಟಾವು ನಡೆಯಲಿದ್ದು, ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖರೀದಿ ಕೇಂದ್ರ ಆರಂಭಿಸಲು ಒಪ್ಪಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.