ಉಡುಪಿ: ಮಾರ್ಚ್ 31 ರಿಂದ ಏ.15 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 55 ಕೇಂದ್ರಗಳನ್ನು ತೆರೆಯಲಾಗಿದ್ದು ಸುಗಮವಾಗಿ ನಡೆಯಲು ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ರೆಗ್ಯೂಲರ್, ಖಾಸಗಿ ಮತ್ತು ಪುನಾರಾವರ್ತಿತ ಸೇರಿದಂತೆ 7,185 ಬಾಲಕರು ಮತ್ತು 6,568 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿ ಸ್ಮಾರ್ಟ್ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಬಳಸುವಂತಿಲ್ಲ. ಕೇಂದ್ರದಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನವೇ ವಿದ್ಯಾರ್ಥಿಗಳನ್ನು ಪರಿಶೀಲಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಸಮಸ್ಯೆಗಳಾಗದಂತೆ ಎಚ್ಚರವಹಿಸಬೇಕು. ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು, ಗ್ರಾಮೀಣ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಪರೀಕ್ಷೆಗೆ ಬರಲು ಅನುಕೂಲವಾಗುವಂತೆ ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಪಾಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು. ಜಿಲ್ಲೆಯ ವಿದ್ಯಾರ್ಥಿಗಳು ಸೌಲಭ್ಯ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಅವರಿಗೆ ಸೂಚನೆ ನೀಡಿದರು.
ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡಬೇಕು, ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟ ವಾಹನ, ಪರೀಕ್ಷಾ ಕೇಂದ್ರ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಮಾಡಬೇಕು, ಎಲ್ಲ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳು ತಲುಪುಬೇಕು, ಮಾರ್ಗಾಧಿಕಾರಿಗಳನ್ನು ನೇಮಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಡಿಡಿಪಿಐ ಗಣಪತಿ, ಸಹಾಯಕ ಖಜಾನಾಧಿಕಾರಿ ರೂಪಶ್ರೀ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಜಿಲ್ಲಾ ನೋಡೆಲ್ ಅಧಿಕಾರಿ ಸಿಪ್ರಿಯಾನ್ ಮೆಂಥಾರೋ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.