ಗುರುವಾರ , ಮಾರ್ಚ್ 30, 2023
24 °C
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ 14,384 ವಿದ್ಯಾರ್ಥಿಗಳು, 2 ದಿನ ಪರೀಕ್ಷೆ; ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಸೋಂಕಿತರಿಗೆ ಕೋವಿಡ್‌ ಕೇರ್ ಕೇಂದ್ರಗಳಲ್ಲಿ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಹಾಗೂ 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 7,597 ಬಾಲಕರು, 6,787 ಬಾಲಕಿಯರು ಸೇರಿದಂತೆ 14,384 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದು, 111 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 88 ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿ 2,266 ಸಿಬ್ಬಂದಿಯನ್ನು ವಿವಿಧ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಎಲ್ಲ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಬೇಕು. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಲು ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳಿದ್ದರೆ, ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಹೆಚ್ಚುವರಿ ಮೀಸಲು ಕೊಠಡಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದರು.

ಕೊಕರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಯಾವ ವಾಹನದಲ್ಲಿ ಬರುತ್ತಾರೆ ಎಂಬ ಬಗ್ಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಮಾಹಿತಿ ಪಡೆಯಬೇಕು. ವಾಹನದ ವ್ಯವಸ್ಥೆ ಇಲ್ಲದ ವಿದ್ಯಾರ್ಥಿಗಳು ಮುಂಚಿತವಾಗಿ ಮಾಹಿತಿ ನೀಡಿದರೆ ಜಿಲ್ಲಾಡಳಿತ ವಾಹನದ ವ್ಯವಸ್ಥೆ ಮಾಡಲಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಪರೀಕ್ಷಾ ಕೆಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪ್ರಶ್ನೆ ಪತ್ರಿಕಕೆ ಸಾಗಿಸುವ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಅಗತ್ಯವಿದ್ದಲ್ಲಿ ಸೂಕ್ತ ವಾಹನಗಳ ವ್ಯವಸ್ಥೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನಿರ್ದೇಶನ ನೀಡಿದರು.

ಪರೀಕ್ಷೆ ಆರಂಭದ 2 ದಿನ ಮುಂಚೆ ಆರೋಗ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಿಕ್ಷಣ ಇಲಾಖೆಯಿಂದ ಮಾಕ್ ಡ್ರಿಲ್ ಆಯೋಜಿಸಿ ಪರೀಕ್ಷಾ ಸಿದ್ಧತೆ ಕ್ರಮಗಳ ಬಗ್ಗೆ ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯಾಗಬೇಕು. ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಎಎಸ್‌ಪಿ ಕುಮಾರಚಂದ್ರ, ಡಿಡಿಪಿಐ ಎನ್.ಎಚ್.ನಾಗೂರ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ, ಡಯಟ್ ಪ್ರಾಂಶುಪಾಲ ವೇದಮೂರ್ತಿ, ಪರೀಕ್ಷಾ ಕೇಂದ್ರಗಳ ಅಧೀಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು