ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಿ

ಬೇಡಿಕೆ ಈಡೇರದಿದ್ದರೆ ಜುಲೈ 12ರಂದು ರಾಜ್ಯದಾದ್ಯಂತ ಪ್ರತಿಭಟನೆ: ಸುಂದರ್ ಮಾಸ್ತರ್
Last Updated 2 ಜುಲೈ 2022, 15:08 IST
ಅಕ್ಷರ ಗಾತ್ರ

ಉಡುಪಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಲು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್ ಆಯೋಗ ನೀಡಿರುವ ವರದಿಯನ್ನು ಜಾರಿಗೊಳಿಸಬೇಕು ಎಂದು ದಸಂಸ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಸಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ, ಎಸ್‌ಟಿ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸಲಿದ್ದಾರೆ ಜುಲೈ 12ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಾಗಮೋಹನ್ ದಾಸ್ ವರದಿಯನ್ನು ಪರಿಶೀಲನೆಗೆ ನ್ಯಾಯಮೂರ್ತಿ ಸುಭಾಷ್ ಅಡಿ ಸಮಿತಿಗೆ ವಹಿಸಲಾಗಿದ್ದು, ತಕ್ಷಣ ಆದೇಶ ಹಿಂಪಡೆದು ನೇರವಾಗಿ ಅನುಷ್ಠಾನಗೊಳಿಸಬೇಕು, ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಕೊಡಬೇಕು, ಗೋಮಾಳ ಸರ್ಕಾರಿ ಜಮೀನು ಮಾರಾಟ ತಡೆಯಬೇಕು, ಎಲ್ಲ ಗ್ರಾಮಗಳಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಸ್ಮಶಾನ ಒದಗಿಸಬೇಕು.

ಖಾಸಗಿ ಕ್ಷೇತ್ರದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕು, ಗುತ್ತಿಗೆ, ಹೊರಗುತ್ತಿಗ ಪದ್ಧತಿ ರದ್ದುಮಾಡಿ ಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸಬೇಕು, ಗ್ರಾಮ ಸಹಾಯಕರು, ಪೌರ ಕಾರ್ಮಿಕ ಸೇವೆ ಖಾಯಂಗೊಳಿಸಬೇಕು, ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕು, ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡಬೇಕು, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಉದ್ಯೋಗ ಮತ್ತಿತರ ಸೌಲಭ್ಯ ಪಡೆದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊರಗ ಮುಖಂಡರಾದ ಗಣೇಶ್ ಕೊರಗ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ಉಪ್ಪೂರು, ಮರಾಠಿ ಸಂಘಟನೆ ಜಿಲ್ಲಾಧ್ಯಕ್ಷ ಅನಂತ ನಾಯ್ಕ, ಕೊರಗ ಮುಖಂಡ ಗಣೇಶ್ ಬಾರ್ಕೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT