ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆನ್‌ಲೈನ್ ಕಲಿಕೆಗೆ ನೆರವಾದ ಟ್ಯಾಬ್ಲೆಟ್‘

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಟ್ಯಾಬ್ಲೆಟ್‌ ವಿತರಣೆ
Last Updated 23 ಜೂನ್ 2021, 14:40 IST
ಅಕ್ಷರ ಗಾತ್ರ

ಉಡುಪಿ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಲು ಸರ್ಕಾರಿ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸುತ್ತಿರುವುದು ಉತ್ತಮ ಕಾರ್ಯ ಎಂದು ಶಾಸಕ ರಘುಪತಿ ಭಟ್‌ ಹೇಳಿದರು.

ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಮಾರ್ಟ್‌ ಕ್ಲಾಸ್‌ಗಳ ಉದ್ಘಾಟನೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿ.ಸಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಟ್ಯಾಬ್ಲೆಟ್‌ಗಳ ವಿತರಣೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿಗಳಿಗೆ ಹಾಜರಾಗಲು ಅನುಕೂಲವಾಗಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಆಸಕ್ತಿಯಿಂದ ತೊಡಗಿಸಿಕೊಂಡಾಗ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ. ಆದರೆ, ಈಚೆಗೆ ಯುವಜನರು ಸ್ಮಾರ್ಟ್ ಫೋನ್‌ಗಳನ್ನು ಸದುದ್ದೇಶಕ್ಕೆ ಬಳಸಿಕೊಳ್ಳದೆ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಹೆಚ್ಚಾಗುತ್ತಿದೆ. ಟ್ಯಾಬ್ಲೆಟ್‌ಗಳನ್ನು ಉತ್ತಮ ಉದ್ದೇಶಕ್ಕೆ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಕೊರೊನಾದಿಂದ ಎಲ್ಲ ಶಾಲಾ–ಕಾಲೇಜುಗಳು ಮುಚ್ಚಲ್ಪಟ್ಟಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಮುಂದೆ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅನುಕೂಲವಾಗುವಂತೆ, ಕೋವಿಡ್ ಲಸಿಕಾ ಅಭಿಯಾನವನ್ನು ಆರಂಭಿಸಲಾಗುವುದು. ಪ್ರತಿ ವಿದ್ಯಾರ್ಥಿಗೂ ಲಸಿಕೆ ಹಾಖಿ ಶಾಲಾ- ಕಾಲೇಜುಗಳನ್ನು ಪುನಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.

ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಹೆಗ್ಡೆ ಮಾತನಾಡಿ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ಸೌಲಭ್ಯ ದೊರಕುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದ್ದು, ಟ್ಯಾಬ್ಲೆಟ್‌ ವಿತರಿಸಲಾಗಿದೆ. ಇಂಟರ್‌ನೆಟ್ ಸಂಪರ್ಕ ಪಡೆಯುವುದರೊಂದಿಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ-ಉಡುಪಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT