ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ದಿನಕ್ಕೆ ಸರಾಸರಿ 100 ಕೋವಿಡ್ ಪೀಡಿತರು ಗುಣಮುಖ

ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ ಅಧಿಕಾರಿಗಳು
Last Updated 6 ಜೂನ್ 2020, 14:46 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳಲ್ಲಿ ದಿನಕ್ಕೆ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಂಡುಬಂದಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಶೇ 98 ಮಂದಿಗೆ ರೋಗದ ಲಕ್ಷಣಗಳು ಇಲ್ಲ. ಸೋಂಕಿತರ ಚಿಕಿತ್ಸೆಗಾಗಿ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ 125, ಕಾರ್ಕಳದಲ್ಲಿ 75, ಎಸ್.ಡಿ.ಎಂ ಕಾಲೇಜಿನಲ್ಲಿ 180 ಮತ್ತು ಕೊಲ್ಲೂರಿನಲ್ಲಿ 250 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೋವಿಡ್ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಮಾಹಿತಿ ನೀಡಿದರು.

ಇದುವರೆಗೆ ಕಂಡು ಬಂದಿರುವ ಪಾಸಿಟಿವ್ ಪ್ರಕರಣಗಳಲ್ಲಿ ಯಾವುದೇ ರೋಗಿಗೆ ಕೃತಕ ಆಮ್ಲಜನಕ ವ್ಯವಸ್ಥೆ, ವೆಂಟಿಲೇಟರ್, ಐಸಿಯು ಸೌಲಭ್ಯ ನೀಡುವಷ್ಟು ಗಂಭೀರ ಪ್ರಕರಣಗಳು ಕಂಡುಬಂದಿಲ್ಲ. ಸೋಂಕಿತರೆಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯವಾಗಿದ್ದಾರೆ. ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ ಎಂದು ತಿಳಿಸಿದರು.

ಹೋಂ ಕ್ವಾರಂಟೈನ್‌ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿನೀಡಿ ಪರಿಶೀಲಿಸುತ್ತಿದ್ದಾರೆ. ರೋಗದ ಲಕ್ಷಣ ಕಂಡುಬಂದ ಕೂಡಲೇ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಜಿಲ್ಲೆಯ ಸರ್ಕಾರಿ ಕೋವಿಡ್ ಲ್ಯಾಬ್ 10 ದಿನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ರಾಷ್ಟ್ರೀಯ ಹೆದ್ದಾರಿ 169 ಎ ವ್ಯಾಪ್ತಿಯ ಪರ್ಕಳ ಸಮೀಪದ ಗುಂಡಿಗೆ ಬಿದ್ದು ವಾಹನ ಸವಾರು ಪೆಟ್ಟು ಮಾಡಿಕೊಳ್ಳುತ್ತಿದ್ದಾರೆ. ಅಪಾಯಕಾರಿ ಗುಂಡಿಯನ್ನು ಕೂಡಲೇ ಕಾಂಕ್ರೀಟ್‌ನಿಂದ ಮುಚ್ಚಬೇಕು. ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.

ಕುಂದಾಪುರ ಶಾಸ್ತ್ರೀ ಸರ್ಕಲ್ ಕಾಮಗಾರಿ ಪ್ರಗತಿ ಬಗ್ಗೆ ಉತ್ತರಿಸಿದ ಅಧಿಕಾರಿಗಳು, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದ್ದು, ಕಾರ್ಮಿಕರ ಸಮಸ್ಯೆಯಿಂದ ನಿಧಾನಗತಿಯಲ್ಲಿ ಕೆಲಸ ನಡೆಯುತ್ತಿದೆ. 2 ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಭರವಸೆ ನೀಡಿದರು.

ಮಳೆಗಾಲದಲ್ಲಿ ವಿದ್ಯುತ್ ಪೂರೈಕೆ ವ್ಯವಸ್ತೆ ಹಾನಿಯಾದರೆ ಮೆಸ್ಕಾಂ ಶೀಘ್ರ ದುರಸ್ಥಿ ಮಾಡಬೇಕು. ಇದಕ್ಕಾಗಿ ಅಗತ್ಯ ಸಿಬ್ಬಂದಿ ನೇಮಕಕ್ಕೆ ಸಂಸದರು ಸೂಚಿಸಿದರು. 140 ಗ್ಯಾಂಗ್ ಮನ್‌ಗಳ ನೇಮಕವಾಗಿದೆ. ಇನ್ನೂ 140 ಮಂದಿ ನೇಮಕ ಮಾಡಿಕೊಳ್ಳಲಾಗುವುದು ಹಾಗೂ 3 ವಾಹನಗಳನ್ನು ಪಡೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ನಿಟ್ಟೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೇ 90 ಸಿವಿಲ್ ಕೆಲಸಗಳು ಮುಕ್ತಾಯಗೊಂಡಿದು, ಎಲೆಕ್ಟ್ರಿಕ್‌ ಕೆಲಸಗಳು ಬಾಕಿ ಇವೆ. 2 ತಿಂಗಳಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯ 1,34,000 ರೈತರ ಖಾತೆಗಳಿಗೆ ₹ 94.86 ಕೋಟಿ ಜಮೆ ಆಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಪ್ರದಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಪಡಿತರ, ನಿಗಧಿತ ಅವಧಿಯೊಳಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಕಾಮಾಗಾರಿ ಪೂರ್ಣ, ಸ್ವಚ್ಚ ಭಾರತ್ ಯೋಜನೆಗೆ ಒತ್ತು ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT