ಸೋಮವಾರ, ಜೂನ್ 14, 2021
27 °C
ನಿಯಮ ಉಲ್ಲಂಘಿಸಿ ರಸ್ತೆಗಿಳಿಸಿದ ವಾಹನಗಳ ಮುಟ್ಟುಗೋಲು

ಸೋಂಕಿತರಿಗೆ ಧೈರ್ಯ ತುಂಬಿದ ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೋವಿಡ್‌ ಎರಡನೇ ಅಲೆ ನಗರಗಳು ಸೇರಿದಂತೆ ಗ್ರಾಮಗಳಿಗೂ ದಾಂಗುಡಿ ಇಟ್ಟಿದ್ದು ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹಳ್ಳಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಕೈಹಾಕಿದೆ.

ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್‌, ಕಟಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಮನೆಗಳಿಗೆ ತೆರಳಿ ಸೋಂಕಿತರಿಗೆ ಧೈರ್ಯ ತುಂಬಿದರು. ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯಲು ವ್ಯವಸ್ಥೆ ಇದೆಯೇ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಸಮಸ್ಯೆ ಎದುರಾಗಿದೆಯೇ ಎಂಬ ಮಾಹಿತಿ ಕಲೆ ಹಾಕಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.

ವಾಹನ ಮುಟ್ಟುಗೋಲು:

ಕೋವಿಡ್‌ ಎರಡನೇ ಅಲೆಯ ತಡೆಗೆ ಕಠಿಣ ಲಾಕ್‌ಡೌನ್ ಜಾರಿಗೊಳಿಸಿದ್ದರೂ ಅನಗತ್ಯವಾಗಿ ನಗರದಲ್ಲಿ ಓಡಾಡುತ್ತಿದ್ದವರಿಗೆ ಜಿಲ್ಲಾಧಿಕಾರಿ ಮತ್ತೆ ಬಿಸಿ ಮುಟ್ಟಿಸಿದರು. 

ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದ್ದರೂ ನಿಯಮ ಉಲ್ಲಂಘಿಸಿ ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಇದೇವೇಳೆ ಲಾಕ್‌ಡೌನ್ ಜಾರಿಯಾದ ಬಳಿಕವೂ ಅನಗತ್ಯವಾಗಿ ಸಂಚರಿಸುತ್ತಿದ್ದ ಬೈಕ್‌ಗಳನ್ನು ಮುಟ್ಟುಗೋಲು ಹಾಕಿಕೊಂಡರು. 

ಬಳಿಕ ಮಲ್ಪೆಗೆ ತೆರಳಿದ ಜಿಲ್ಲಾಧಿಕಾರಿ ಬೈಕ್‌ ಸವಾರರನ್ನು ಅಡ್ಡಗಟ್ಟಿ ಎಚ್ಚರಿಕೆ ನೀಡಿದರು. ಅಗತ್ಯ ವಸ್ತುಗಳನ್ನು ಖರೀದಿಸಲು ನಗರಗಳಿಗೆ ಬರಬೇಕಿಲ್ಲ. ಮನೆಯ ಸುತ್ತಮುತ್ತಲಿರುವ ಅಂಗಡಿಗಳಲ್ಲಿ ದಿನಸಿ ಖರೀದಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಸ್ತೆಗಿಳಿದ ಅಧಿಕಾರಿಗಳು:

ಹೆಚ್ಚುವರಿ ಜಿಲ್ಲಾಧಿಕಾರಿ, ಕುಂದಾಪುರ ಉಪ ವಿಭಾಗಾಧಿಕಾರಿ, ತಹಶೀಲ್ದಾರ್‌ಗಳು, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸರು ಕೂಡ ರಸ್ತೆಗಿಳಿದು ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಂಡರು.

ಜಿಲ್ಲೆಯಾದ್ಯಂತ ತ್ರಿಚಕ್ರ, ದ್ವಿಚಕ್ರ ಹಾಗೂ ಕಾರುಗಳು ಸೇರಿದಂತೆ 94 ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ಮಾರ್ಗಸೂಚಿ ಉಲ್ಲಂಘಿಸಿ ತೆರೆದಿದ್ದ ಅಂಗಡಿಗಳಿಗೆ ಎಚ್ಚರಿಕೆ ನೀಡಿ ಮುಚ್ಚಿಸಲಾಯಿತು.  ₹ 70,000 ದಂಡ ವಸೂಲಿ ಮಾಡಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು