ಸೋಮವಾರ, ಮೇ 16, 2022
22 °C
ಜಿಲ್ಲಾಧಿಕಾರಿ ಜಿ.ಜಗದೀಶ್

ಲಿಂಗತ್ವ ಅಲ್ಪಸಂಖ್ಯಾತರಿಗೆ ಹೊರಗುತ್ತಿಗೆ ನೌಕರಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ವಿದ್ಯಾರ್ಹತೆ ಕುರಿತು ಮಾಹಿತಿ ಸಂಗ್ರಹಿಸಿ ಸರ್ಕಾರಿ ಕಚೇರಿಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಇಚ್ಚಿಸುವವರಿಗೆ ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುರ್ನವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ, ದಮನಿತ ಮಹಿಳೆಯರ ಸಲಹಾ ಸಮಿತಿ ಹಾಗೂ ತರಬೇತಿ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ವಿಶೇಷ ಆದ್ಯತೆ ನೀಡಿ. ಅವರ ವಿದ್ಯಾರ್ಹತೆಯ ಮಾಹಿತಿಯ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಸ್ವ-ಉದ್ಯೋಗ ಮಾಡಲು ಇಚ್ಛಿಸುವ, ತರಬೇತಿಯ ಅವಶ್ಯಕತೆ ಇರುವವವರಿಗೆ ತರಬೇತಿ ಕೊಡಿಸುವ ವ್ಯವಸ್ಥೆ ಮಾಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಿವೇಶನದ ಅಗತ್ಯ ಇರುವ ಲಿಂಗತ್ವ ಅಲ್ಪಸಂಖ್ಯಾತರು ವಾಸ ಮಾಡುವ ಗ್ರಾಮ ಅಥವಾ ನಗರ ಪ್ರದೇಶಗಳಲ್ಲಿ ಸಂಬಂಧಪಟ್ಟ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಅರ್ಜಿ ನೀಡಬೇಕು. ನಿವೇಶನ ಹಂಚಿಕೆ ಸಮಯದಲ್ಲಿ ವಿಶೇಷ ವರ್ಗದ ಅಡಿಯಲ್ಲಿ ಮೀಸಲಿಡುವ ನಿವೇಶನಗಳನ್ನು ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ಮಂಜೂರು ಮಾಡಬೇಕು ಎಂದು ಸೂಚಿಸಿದರು.

ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಯಲ್ಲಿ ಎಲ್ಲರೊಂದಿಗೆ ಬೆರೆಯಲು ಅಗತ್ಯವಿರುವ ಅವಕಾಶಗಳನ್ನು ನೀಡಬೇಕು. ಸರ್ಕಾರದ ವಿವಿಧ ಯೋಜನೆಯ ಪ್ರಯೋಜನ ಸಿಗಬೇಕು. ಭಿನ್ನಾಭಿಪ್ರಾಯ ಬದಿಗಿಟ್ಟು ಒಗಟ್ಟಿನಿಂದ ಸಮುದಾಯದ ಅಭಿವೃದ್ಧಿಗೆ ಲಿಂಗತ್ವ ಅಲ್ಪಸಂಖ್ಯಾತರು ಮುಂದೆ ಬರಬೇಕು ಎಂದು ಡಿಸಿ ತಿಳಿಸಿದರು.

ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆಯಡಿ ನಿಗದಿತ ಗುರಿಯನ್ವಯ 7 ಮಂದಿಗೆ ಸೌಲಭ್ಯ ಮಂಜೂರು ಮಾಡಲಾಗಿದೆ. ಹೆಚ್ವುವರಿಯಾಗಿ ಸಲ್ಲಿಕೆಯಾಗಿದ್ದ 4 ಅರ್ಜಿದಾರರಿಗೂ ಅನುದಾನ ಬಿಡುಗಡೆ ಮಾಡಿ. ಈ ಸಂಬಂಧ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಪತ್ರ ಬರೆಯಿರಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿಎಚ್‌ಓ ಡಾ.ಸುದೀರ್ ಚಂದ್ರ ಸೂಡಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು