ಗುರುವಾರ , ಜುಲೈ 7, 2022
23 °C
ದ್ವೀಪದಲ್ಲಿ ಗರಿಷ್ಠ ಸುರಕ್ಷತೆಗೆ ಸೂಚನೆ: ನಗರಸಭೆ ಪೌರಾಯುಕ್ತ ಉದಯ್‌ ಶೆಟ್ಟಿ

ಸೇಂಟ್ ಮೇರಿಸ್ ದ್ವೀಪ: ದುರಂತ ಮರುಕಳಿಸಿದರೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮಲ್ಪೆಯ ಸೇಂಟ್ ಮೇರಿಸ್ ದ್ವೀಪದಲ್ಲಿ ಈಚೆಗೆ ಹಲವು ಪ್ರವಾಸಿಗರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ‌ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಹಾಗೂ ದುರಂತ ಮರುಕಳಿಸಿದರೆ ದ್ವೀಪಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಉದಯ ಶೆಟ್ಟಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆಯಲ್ಲಿ ಗುರುವಾರ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್‌ ಅವರ ಪ್ರಶ್ನೆಗೆ ಉತ್ತರಿಸಿದ ಪೌರಾಯುಕ್ತರು, ಈಚೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿ ಸಭೆ ನಡೆದಿದ್ದು, ಸೇಂಟ್ ಮೇರಿಸ್ ದ್ವೀಪದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ದ್ವೀಪದಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದ್ದು, ತಡೆಬೇಲಿ ಹಾಕಲಾಗಿದೆ. ಅಲ್ಲಲ್ಲಿ ಎಚ್ಚರಿಕೆಯ ಫಲಕಗಳನ್ನು ಅಳವಡಿಸಲಾಗಿದೆ. ಸೆಲ್ಫಿ ತೆಗೆದುಕೊಳ್ಳಲು ಸ್ಥಳಗಳನ್ನು ಗುರುತಿಸಲಾಗಿದೆ. ಪ್ರವೇಶ ದ್ವಾರದಲ್ಲಿ ಪ್ರವಾಸಿಗರಿಗೆ ದ್ವೀಪದ ಬಗ್ಗೆ ಮಾಹಿತಿ ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು.

ನಿಯಮ ಉಲ್ಲಂಘಿಸಿ ಸಮುದ್ರಕ್ಕೆ ಇಳಿದವರಿಗೆ ದಂಡ ವಿಧಿಸಲಾಗುವುದು. ದ್ವೀಪದಲ್ಲಿ ಏಕಕಾಲಕ್ಕೆ 500ಕ್ಕಿಂತ ಹೆಚ್ಚು ಪ್ರವಾಸಿಗರಕ್ಕೆ ಪ್ರವೇಶ ನೀಡಬಾರದು ಎಂಬ ಷರತ್ತು ವಿಧಿಸಲಾಗಿದೆ ಎಂದು ಪೌರಾಯುಕ್ತರು ತಿಳಿಸಿದರು.

ವಾರಾಹಿ ಕಾಮಗಾರಿ ಗದ್ದಲ:

ಉಡುಪಿಗೆ ಕುಡಿಯುವ ನೀರು ಸರಬರಾಜು ಮಾಡುವ ವಾರಾಹಿ ಪೈಪ್‌ಲೈನ್‌ ‌ಅಳವಡಿಕೆ ಕಾಮಗಾರಿ ಅವ್ಯವಸ್ಥೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸದಸ್ಯರು ಹರಿಹಾಯ್ದರು. ಕಾಮಗಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ದೂರು ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ಸದಸ್ಯ ಪ್ರಭಾಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಕಾಮಗಾರಿಗೆ ಹಲವು ಕಡೆಗಳಲ್ಲಿ ರಸ್ತೆಗಳನ್ನು ಅಗೆದುಹಾಕಲಾಗಿದ್ದು ಮಳೆ ಬಂದರೆ ಗುಂಡಿ ತುಂಬಿ ರಸ್ತೆ ಕುಸಿಯುವ ಅಪಾಯವಿದೆ ಎಂದು ಸದಸ್ಯ ರಮೇಶ್ ಕಾಂಚನ್‌ ದೂರಿದರು. ಪೌರಾಯುಕ್ತರು ಪ್ರತಿಕ್ರಿಯಿಸಿ, ದೂರಗಳಿದ್ದರೆ ಸಲ್ಲಿಸುವಂತೆ ಹಾಗೂ ಸ್ಥಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಮತ ರಾಜಕಾರಣಕ್ಕಾಗಿ ಅಗತ್ಯ ಇಲ್ಲದ ಕಡೆಗಳಲ್ಲಿ ಕಾಂಕ್ರೀಟ್‌ ಕಾಮಗಾರಿ ಮಾಡಲಾಗುತ್ತಿದೆ. ಕಿನ್ನಿಮುಲ್ಕಿ ವಾರ್ಡ್‌ನ ಮಿಷನ್ ಕಂಪೌಂಡ್‍ನಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ₹ 15 ಲಕ್ಷ ಅನುದಾನ ನೀಡಲಾಗಿದ್ದು, ಕಾಮಗಾರಿ ಅಗತ್ಯವಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಕೃಷ್ಣರಾವ್ ಕೊಡಂಚ ಒತ್ತಾಯಿಸಿದರು.

ವಾರ್ಡ್‌ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಆಕ್ಷೇಪಿಸಿ ಸ್ವಂತ ವಾರ್ಡ್‌ ಬಿಟ್ಟು ಮತ್ತೊಂದು ವಾರ್ಡ್‌ನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

ಬೀದಿ ನಾಯಿಗಳ ಸಂತಾನಹರಣ ಚಿಕಿತ್ಸೆ ಹಾಗೂ ಆ್ಯಂಟಿ ವೈರಸ್ ಲಸಿಕೆ ನೀಡುವ ಕಾರ್ಯಕ್ಕೆ ₹ 4,83,900 ಬಿಲ್ ಪಾವತಿಗೆ ಸಭೆಯಲ್ಲಿ ಅನುಮೋದನೆ ಕೋರಲಾಯಿತು. ಕಿನ್ನಿಮುಲ್ಕಿ ವಾರ್ಡ್‌ನ ಕೆಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆಯಾಗದ ಬಗ್ಗೆ ಅಮೃತಾ ಕೃಷ್ಣಮೂರ್ತಿ ಧನಿ ಎತ್ತಿದರು.

ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.