ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ ಮಾಫಿಯಾ ನಿರ್ಮೂಲನೆಗೆ ಆದ್ಯತೆ

ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ: ನೂತನ ಉಡುಪಿ ಎಸ್‌ಪಿ ಅಕ್ಷಯ್ ಎಂ.ಹಾಕೆ
Last Updated 17 ಆಗಸ್ಟ್ 2022, 15:38 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲೆಯ ನೂತನ ಎಸ್‌ಪಿ ಆಗಿ ಅಕ್ಷಯ್‌ ಎಂ.ಹಾಕೆ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್‌ಪಿ ಎನ್‌.ವಿಷ್ಣುವರ್ಧನ್‌ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಎಸ್‌ಪಿ ಅಕ್ಷಯ್ ಎಂ.ಹಾಕೆ ‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಡ್ರಗ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಗೂ ಸಂಚಾರ ವ್ಯವಸ್ಥೆಯ ಬಲವರ್ಧನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳು ತುಂಬುತ್ತಿರುವ ಹೊತ್ತಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಸಂತಸ ತಂದಿದೆ. ಜನರ ನಿರೀಕ್ಷೆ ಹಾಗೂ ಜನಸ್ನೇಹಿಯಾಗಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ ಎಂದರು.

ಸಾರ್ವಜನಿಕರು ಪೊಲೀಸ್‌ ವ್ಯವಸ್ಥೆಯ ವಿರುದ್ಧ ಭಯಪಡಬೇಕಿಲ್ಲ. ಕಾನೂನು ನೆರವು ಅಥವಾ ಇಲಾಖೆಯ ಸೇವೆಯ ಅಗತ್ಯವಿದ್ದವರು ನೇರವಾಗಿ ಠಾಣೆಗಳಿಗೆ ಬಂದು ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಅಹವಾಲು ಸಲ್ಲಿಸಬಹುದು ಎಂದು ಭರವಸೆ ನೀಡಿದರು.

ಉಡುಪಿ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಸೌಹಾರ್ದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಎಚ್ಚರ ವಹಿಸಲಾಗುವುದು. ಉಡುಪಿ ಜಿಲ್ಲೆಯ ಜನರು ಸುಸಂಸ್ಕೃತರು, ವಿವಾರ ವಂತರು, ಪ್ರಗತಿಪರರು ಹಾಗೂ ವಿದ್ಯಾವಂತರಾಗಿರುವುದರಿಂದ ಸಮಸ್ಯೆಗಳು ಉದ್ಭವಿಸಿದಾಗ ಪೊಲೀಸ್ ಇಲಾಖೆಗೆ ಉತ್ತಮ ಸಹಕಾರ ಸಿಗುವ ವಿಶ್ವಾಸವಿದೆ ಎಂದರು.

ರಾಜ್ಯದಲ್ಲಿ 2 ವರ್ಷಗಳಿಂದ ಮಾದಕವಸ್ತು ಜಾಲವನ್ನು ಮಟ್ಟಹಾಕಲು ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಡ್ರಗ್ಸ್ ಮಾಫಿಯಾದಿಂದ ಭಯೋತ್ಪಾದನಾ ಕೃತ್ಯಗಳಿಗೆ ಹಣ ಹರಿಯುತ್ತಿದ್ದು, ದೇಶದ ಯುವ ಸಂಪತ್ತು ನಾಶವಾಗುತ್ತಿದ್ದು, ಮಾದಕ ವಸ್ತುಗಳ ಪೂರೈಕೆ ಹಾಗೂ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಎಸ್‌ಪಿ ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ವೇದಿಕೆ ಕಲ್ಪಿಸಲು ಫೋನ್ ಇನ್ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚಿಂತಿಸಲಾಗುವುದು. ನಿರಂತರ ಜನಸಂಪರ್ಕ ಸಭೆಗಳನ್ನು ಆಯೋಜಿಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಕ್ತ ಸಂವಾದಕ್ಕೆ ಅವಕಾಶ ಮಾಡಿಕೊಡಲಾಗುವುದು. ಪೊಲೀಸರ ಹಾಗೂ ಸಾರ್ವಜನಿಕರ ನಡುವೆ ಇರುವ ಅಂತರವನ್ನು ತಗ್ಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT