ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮತ್ತೊಮ್ಮೆ: ಕೋಟ ಗೆಲುವಿಗೆ ಬದ್ಧತೆಯಿಂದ ಶ್ರಮಿಸಿ; ಯಶ್‌ಪಾಲ್ ಸುವರ್ಣ

ಕಾರ್ಯಕರ್ತರಿಗೆ ಶಾಸಕ ಯಶ್‌ಪಾಲ್ ಸುವರ್ಣ ಕರೆ
Published 18 ಏಪ್ರಿಲ್ 2024, 16:19 IST
Last Updated 18 ಏಪ್ರಿಲ್ 2024, 16:19 IST
ಅಕ್ಷರ ಗಾತ್ರ

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಲಿದ್ದು ದೇಶವನ್ನು ಸಮೃದ್ಧ, ವಿಕಸಿತ ಹಾಗೂ  ವಿಶ್ವಗುರುವಾಗಿಸಲಿದೆ. ಪ್ರಜ್ಞಾವಂತ ಮತದಾರರು ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿಸಿ ದೇಶದ ಏಕತೆ, ಭದ್ರತೆ ಮತ್ತು ಸಮಗ್ರತೆಗೆ ಒತ್ತು ನೀಡುವ ವಿಶ್ವಾಸವಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಪಂದುಬೆಟ್ಟು ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶ ಮೊದಲು ಎಂಬ ಉದಾತ್ತ ಚಿಂತನೆಯ ಜತೆಗೆ ಜನಪರ ಯೋಜನೆಗಳ ಜಾರಿ ಮೂಲಕ ಭಾರತವನ್ನು ಪ್ರಧಾನಿ ಮೋದಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲು ಕಾರ್ಯಕರ್ತರು ಬದ್ಧತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಪ್ರಚಾರಕ್ಕೆ ಸ್ಟಾರ್ ಪ್ರಚಾರಕರು:

ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕಾರ್ನರ್ ಸಭೆಗಳ ಸಹಿತ ವಿವಿಧ ಆಯಾಮಗಳಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಮುಂದೆ ಸ್ಟಾರ್ ಪ್ರಚಾರಕರು ಪ್ರಚಾರ ಹಾಗೂ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಉಚಿತ ಗ್ಯಾರಂಟಿಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆಗಣಿಸಿ, ಬಿಟ್ಟಿ ಪ್ರಚಾರದಲ್ಲಿ ತೊಡಗಿದೆ. ರಾಜ್ಯದ ಖಜಾನೆ ಬರಿದಾಗಿಸಿ, ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಾ ಜನರ ದಾರಿ ತಪ್ಪಿಸುವ ವಿಫಲ ಯತ್ನ ಮಾಡುತ್ತಿದೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಮಾಡಿರುವ ಅನುದಾನದ ವಿವರವನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಮಾತನಾಡಿ, ಅತಿಹೆಚ್ಚು ಸಾಲ ಮಾಡಿರುವ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಸಿದ್ದರಾಮಯ್ಯ ಪಾತ್ರರಾಗಿದ್ದು ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ಅನುದಾನವನ್ನು ಇತರ ಉದ್ದೇಶಗಳಿಗೆ ಬಳಸಿದ್ದಾರೆ.

ಮುದ್ರಾಂಕ ಶುಲ್ಕವನ್ನು 5 ಪಟ್ಟು ಏರಿಸಿ ಖಜಾನೆ ತುಂಬಿಸಲು ಹೊರಟಿದೆ. ಕಂದಾಯ, ಸಾರಿಗೆ ಸಹಿತ ಎಲ್ಲಾ ಕಚೇರಿಗಳು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಸೆಂಟರ್‌ಗಳಾಗಿವೆ ಎಂದು ಆರೋಪಿಸಿದರು.

ಇದೇ ಸಂದರ್ಭ ಬಾಳಿಗಾ ಫಿಶ್ ನೆಟ್ ಮಹಾ ಪ್ರಬಂಧಕ ಚಂದ್ರಶೇಖರ್ ಸುವರ್ಣ ಬಿಜೆಪಿ ಸೇರ್ಪಡೆಯಾದರು. ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಅಂಬಲಪಾಡಿ-ಕಡೆಕಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಸುಧಾಕರ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ನಗರ ಎಸ್.ಸಿ ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು ಇದ್ದರು.

ಸ್ಟಾರ್ ಪ್ರಚಾರಕರ ಕಾರ್ಯಕ್ರಮ

ಏ.19ರಂದು ಉಪ್ಪೂರಿನ ರಾಮಕ್ಷತ್ರಿಯ ಸಭಾಭವನದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾಗವಹಿಸಲಿದ್ದಾರೆ. 20ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯುಉವ ಯುವ ಸಂವಾದದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ 21ರಂದು ಕಾಪುವಿನಲ್ಲಿ ನಡೆಯುವ ರೋಡ್‌ಶೋನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ 23ರಂದು ಬ್ರಹ್ಮಾವರದ ಮಾಬುಕಳದಲ್ಲಿ ನಡೆಯುವ ರೋಡ್ ಶೋದಲ್ಲಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ 24ರಂದು ಮಲ್ಪೆಯ ಸೀವಾಕ್ ಬಳಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT