ಮಂಗಳವಾರ, ಜನವರಿ 19, 2021
17 °C
ವಿವೇಕಾನಂದ ಜಯಂತಿಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು

ವಿವೇಕಾನಂದರ ಚಿಂತನೆಗಳು ಯುವಜನಾಂಗಕ್ಕೆ ಪ್ರೇರಣೆಯಾಗಲಿ: ದಿನಕರ ಬಾಬು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸ್ವಾಮಿ ವಿವೇಕಾನಂದರು ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು, ಅವರ ಚಿಂತನೆ ಮತ್ತು ಆದರ್ಶಗಳು ಯುವ ಶಕ್ತಿಯನ್ನು ಉದ್ದೀಪನಗೊಳಿಸುವ ಮೂಲಕ ಉನ್ನತ ಸಾಧನೆಗೆ ಸಹಕಾರಿಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಬುಧವಾರ ನಗರದ ಪುರಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿವೇಕಾನಂದ ಜಯಂತಿ, ರಾಷ್ಟ್ರೀಯ ಯುವದಿನ, ಮೌಲಿಕ ಶಿಕ್ಷಣ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿ, ವಿವೇಕಾನಂದರ ತತ್ವಾದರ್ಶ, ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಭವಿಷ್ಯದ ಶಿಲ್ಪಿ ನಾವೇ ಆಗಬೇಕು. ವಿವೇಕಾನಂದರಂತಹ ಸಂತರ ಹಾದಿಯಲ್ಲಿ ಸಾಗಿದರೆ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ವಿವೇಕಾನಂದರ ‘ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬ ಘೋಷವಾಕ್ಯವನ್ನು ಯುವಕರು ಅಕ್ಷರಶಃ ಪಾಲಿಸಬೇಕು ಎಂದು ಸಲಹೆ ನೀಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರ ಆರ್.ನಾಯಕ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯ್ಕ್, ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಡಾ.ಗಣೇಶಪ್ಪ ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಸ್ವಾಗತಿಸಿದರು. ಡಾ.ಜಿ.ಶಂಕರ್ ಕಾಲೇಜಿನ ಪ್ರಾಧ್ಯಾಪಕ ಎನ್. ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು. ನೃತ್ಯನಿಕೇತನ ಕೊಡವೂರು ಸಂಸ್ಥೆಯ ಕಲಾವಿದರಿಂದ ‘ನಾರಸಿಂಹ’ ನೃತ್ಯ ರೂಪಕ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು