ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷದಿಂದ ಎಲ್ಲ ಪಂಚಾಯಿತಿಗಳಲ್ಲಿ ತ್ಯಾಜ್ಯ ಸಂಗ್ರಹ

ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್‌ ಸಿಬ್ಬಂದಿಗೆ ಸೂಚನೆ
Last Updated 11 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ಉಡುಪಿ: ತ್ಯಾಜ್ಯ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಅಳವಡಿಸಿಕೊಂಡಿರುವ ವಿಧಾನಗಳು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದಲ್ಲಿ ಸ್ವಚ್ಛ ಭಾರತ ಮಿಷನ್ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಡೆದ ತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಕುರಿತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಆಯೋಜಿಸಿದ್ದ 3 ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿಗೆ ಉತ್ತಮ ಯೋಜನೆ ಜಾರಿಗೊಳಿಸಲಾಗಿದ್ದು, ಇತರೆ ಜಿಲ್ಲೆಗಳ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಇಲ್ಲಿಗೆ ಭೇಟಿನೀಡಿ ಅಧ್ಯಯನ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಯೋಜನೆ ಯಶಸ್ವಿಗೆ ಸ್ವಚ್ಛ ಭಾರತ ಮಿಷನ್‌ನ ಅಧಿಕಾರಿಗಳ ಶ್ರಮ ದೊಡ್ಡದಿದೆ ಎಂದು ಶ್ಲಾಘಿಸಿದರು.

ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ತ್ಯಾಜ್ಯ ವಿಲೇವಾರಿ ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸುವ ಉದ್ದೇಶದಿಂದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ತರಬೇತಿ ಪಡೆದ ಸಿಬ್ಬಂದಿ ಸಾರ್ವಜನಿಕರಿಗೆ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಮೂಡಿಸಬೇಕು, ತ್ಯಾಜ್ಯದ ಬಗ್ಗೆ ಜನರಲ್ಲಿರುವ ಭಾವನೆ ಬದಲಾಗಿ ಗ್ರಾಮಗಳು ಸ್ವಚ್ಛವಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ರಕ್ತ ಜೀಜಾಸುರನಂತೆ ಬೆಳೆಯುತ್ತಿರುವ ತ್ಯಾಜ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಬೇಕು. ಪ್ಲಾಸ್ಟಿಕ್ ಸಮಸ್ಯೆಗೆ ಪೂರ್ಣ ವಿರಾಮ ಹಾಕಿ ಜಿಲ್ಲೆಯನ್ನು ಸ್ವಚ್ಛ, ಸುಂದರ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌ ರಾವ್ ಮಾತನಾಡಿ, ತರಬೇತಿ ಪಡೆಯುವ ಸಿಬ್ಬಂದಿ 2 ದಿನ ಎಸ್‌ಎಲ್‌ಆರ್‌ಎಂ ಘಟಕಗಳಿಗೆ ಭೇಟಿನೀಡಿ, ತ್ಯಾಜ್ಯ ವಿಂಗಡಣೆ ಕುರಿತು ಪ್ರಾಯೋಗಿಕ ತರಬೇತಿ ಪಡೆಯಬೇಕು. ಡಿ.30ರವರೆಗೆ ತಮ್ಮ ಗ್ರಾಮಗಳ ಮನೆಮನೆಗೆ ಭೇಟಿನೀಡಿ, ತ್ಯಾಜ್ಯ ಸಂಗ್ರಹ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ಉಡುಪಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ಸಿಬ್ಬಂದಿ, ಹಾವೇರಿ ಜಿಲ್ಲೆಯ ತಂಡ ಭಾಗವಹಿಸಿತ್ತು.

ಕೆಆರ್‌ಐಡಿಎಲ್ ಯೋಜನಾ ನಿರ್ದೇಶಕ ಕೃಷ್ಣ ಹೆಪ್ಸೂರ್, ಸ್ವಚ್ಚ ಭಾರತ ಮಿಷನ್‌ನ ಜಿಲ್ಲಾ ಸಮಾಲೋಚಕ ಸುಧೀರ್ ಉಪಸ್ಥಿತರಿದ್ದರು.ಜಿಲ್ಲಾ ಸಮಾಲೋಚಕ ರಘುನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT