ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ, ಮಕ್ಕಳ ನಾಪತ್ತೆ ಪ್ರಕರಣ ಶೀಘ್ರ ಪತ್ತೆಹಚ್ಚಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಪತ್ತೆ ಮಾಡದಿದ್ದರೆ ಅಪಾಯಕ್ಕೆ ಸಿಲುಕುವ ಸಾಧ್ಯತೆ
Last Updated 24 ಜುಲೈ 2021, 13:02 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ನಾಪತ್ತೆಯಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲಿ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ನಾಪತ್ತೆಯಾಗುವ ಮಹಿಳೆ ಹಾಗೂ ಮಕ್ಕಳನ್ನು ಶೀಘ್ರದಲ್ಲಿ ಪತ್ತೆ ಹಚ್ಚದಿದ್ದರೆ ಅಪಾಯಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ತನಿಖಾಧಿಕಾರಿಗಳು ಶೀಘ್ರ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ ಮಾಡಬೇಕು ಎಂದರು.

ಮಹಿಳೆಯರು ಹಾಗೂ ಮಕ್ಕಳು ನಾಪತ್ತೆಯಾದಂತಹ ಸಂದರ್ಭಗಳಲ್ಲಿ ಪ್ರಕರಣಗಳನ್ನು ಬೇಧಿಸಲು ಹೆಚ್ಚಿನ ಪೊಲೀಸ್‍ ಸಿಬ್ಬಂದಿಯನ್ನು ವಿಶೇಷ ಕರ್ತವ್ಯದಲ್ಲಿ ನಿಯೋಜಿಸಬೇಕು ಎಂದು ಸೂಚಿಸಿದರು.

ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಆದ್ಯತೆ ಮೇರೆಗೆ ಶೀಘ್ರವಾಗಿ ಇತ್ಯರ್ಥಗೊಳಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಗಮನ ಹರಿಸಬೇಕು. ಉಡುಪಿಯಲ್ಲಿ ಸಾಂತ್ವನ ಕೇಂದ್ರ ಸ್ಥಗಿತಗೊಂಡಿದ್ದು, ನೊಂದ ಮಹಿಳೆಯರು ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಅಗತ್ಯ ನೆರವು ಪಡೆದುಕೊಳ್ಳಬೇಕು. ಇದಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದರು ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯೋಗ ಮಾಡುವ ಕಡೆಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯದಂತೆ ಎಚ್ಚರವಹಿಸಬೇಕು. ಇದಕ್ಕಾಗಿ ಖಾಸಗಿ ಸೇರಿದಂತೆ ಎಲ್ಲ ಕಚೇರಿಗಳಲ್ಲಿ ಅಂತರಿಕ ದೂರು ಸಮಿತಿ ರಚನೆ ಮಾಡಬೇಕು. ಸಮಿತಿ ರಚನೆಯಾಗಿರುವ ಬಗ್ಗೆ ನಿಯಮಿತವಾಗಿ ಪರಿಶೀಲಿಸಿ ಸಭೆ ನಡೆಸಿ ವರದಿ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ವಲಸೆ ಕಾರ್ಮಿಕರಲ್ಲಿ ಬಾಲ್ಯ ವಿವಾಹ ನಡೆಯುವ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಬಗ್ಗೆ ನಿಗಾ ವಹಿಸಬೇಕು. ವಲಸೆ ಕಾರ್ಮಿಕರು ವಾಸಮಾಡುವ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ ಮಕ್ಕಳು 10 ದಿನಗಳಿಗಿಂತ ಹೆಚ್ಚು ಗೈರಾದರೆ ಮಕ್ಕಳ ಮಾಹಿತಿಯನ್ನು ಶಾಲೆಗಳಿಂದ ಪಡೆದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸಲ್ಲಿಸಬೇಕು. ವಲಸೆ ಕಾರ್ಮಿಕರ ಮೂಲ ವಿಳಾಸ, ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹಾಗೂ ಜಿಲ್ಲಾ ಮಟ್ದದ ಅಧಿಕಾರಿಗಳು ಇದ್ದರು.

ಪ್ರಕರಣಗಳ ಮಾಹಿತಿ

ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಜೂನ್ ಅಂತ್ಯದವರೆಗೆ ಬಾಕಿ ಇದ್ದ 63 ಪ್ರಕರಣಗಳಲ್ಲಿ 24 ಪ್ರಕರಣಗಳು ಇತ್ಯರ್ಥಗೊಂಡಿವೆ. 16 ಪ್ರಕರಣಗಳು ಸಾಂತ್ವನ ಕೇಂದ್ರದಲ್ಲಿ ಬಾಕಿ ಇದ್ದು, 23 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಕಾರ್ಕಳ ಮಹಿಳಾ ಸಾಂತ್ವನ ಕೇಂದ್ರದಲ್ಲಿ ದಾಖಲಾದ 23 ಪ್ರಕರಣಗಳಲ್ಲಿ 13 ಇತ್ಯರ್ಥಗೊಂಡಿವೆ. 10 ಪ್ರಕರಣ ಬಾಕಿ ಇವೆ. ವರದಕ್ಷಿಣೆ ನಿಷೇದ ಕಾಯ್ದೆಯಡಿ ಡಿಸೆಂಬರ್‌ವರೆಗೆ ಬಾಕಿ ಇದ್ದ 47 ಪ್ರಕರಣಗಳಲ್ಲಿ, 29 ಇತ್ಯರ್ಥಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT