ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯರ ಬದುಕು ಹಸನುಗೊಳಿಸಿ: ನ್ಯಾಯಾಧೀಶ ಕಿರಣ್ ಗಂಗಣ್ಣವರ್

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿದ ನ್ಯಾಯಾಧೀಶ ಕಿರಣ್ ಗಂಗಣ್ಣವರ್
Published : 2 ಅಕ್ಟೋಬರ್ 2024, 3:50 IST
Last Updated : 2 ಅಕ್ಟೋಬರ್ 2024, 3:50 IST
ಫಾಲೋ ಮಾಡಿ
Comments

ಉಡುಪಿ: ನಮ್ಮ ಬದುಕಿಗೆ ಮಾರ್ಗದರ್ಶಕರಾಗಿರುವ ಹಿರಿಯರ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಹೇಳಿದರು.

ನಗರದ ಎಂಜಿಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ತಾಂತ್ರಿಕತೆಗಳಿಂದಾಗಿ ಇಂದು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಹಿರಿಯರು ಇಂತಹ ಬದಲಾವಣೆಗಳನ್ನು ಒಪ್ಪಿಕೊಂಡರೆ ಸಂಘರ್ಷಗಳನ್ನು ತಪ್ಪಿಸಿಕೊಳ್ಳಬಹುದು ಎಂದರು.

ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದೆ. ನ್ಯಾಯಾಲಯಗಳಲ್ಲೂ ಹಿರಿಯ ನಾಗರಿಕರ ಪ್ರಕರಣಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಅವುಗಳ ಪ್ರಯೋಜನ ಪಡೆದಾಗ ಮಾತ್ರ ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಿ ಉತ್ತಮವಾಗಿ ಜೀವಿಸಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಮಾತನಾಡಿ, ಹಿರಿಯ ನಾಗರಿಕರು ಯಾರಿಗೂ ಅವಲಂಬಿತರಾಗದೆ ಸ್ವತಂತ್ರವಾಗಿ ಜೀವನ ನಡೆಸಲು ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಹಿರಿಯ ನಾಗರಿಕರ ಕ್ರೀಡಾಕೂಟ, ಇತರ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮನು ಹಂದಾಡಿ ಅವರಿಂದ ‘ನಕ್ಕು ನಲಿ’ ವಿಶೇಷ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ವೈದ್ಯಾಧಿಕಾರಿ ಡಾ.ಐ.ಪಿ. ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ, ಎಂಜಿಎಂ ಕಾಲೇಜು ಪ್ರಾಂಶುಪಾಲೆ ಪ್ರೊ.ಲಕ್ಷ್ಮಿ ನಾರಾಯಣ ಕಾರಂತ್, ಎಂಜಿಎಂ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ ಎ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಕಾರ್ತಿಕೇಯನ್ ಇದ್ದರು. ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಚ್. ವಿಶ್ವನಾಥ್ ಸ್ವಾಗತಿಸಿದರು. ಗಣನಾಥ್ ಎಕ್ಕಾರು ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ವಂದಿಸಿದರು.

ಹಿರಿಯ ನಾಗರಿಕರು ಯಾವುದೇ ಕೆಲಸದ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರನ್ನು ಗೌರವದಿಂದ ಕಾಣುವುದರೊಂದಿಗೆ ಅವರಿಗೆ ಮೊದಲ ಆದ್ಯತೆ ನೀಡಬೇಕು.
ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT