ಬಡ್ತಿ ಮೀಸಲಾತಿ: ಯಥಾಸ್ಥಿತಿ ಕಾಯ್ದುಕೊಳ್ಳಲು ಒತ್ತಾಯ

7

ಬಡ್ತಿ ಮೀಸಲಾತಿ: ಯಥಾಸ್ಥಿತಿ ಕಾಯ್ದುಕೊಳ್ಳಲು ಒತ್ತಾಯ

Published:
Updated:
Deccan Herald

ಕಾರವಾರ: ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಕಾಯ್ದೆ – 2018ನ್ನು ಜಾರಿ ಮಾಡಬಾರದು ಎಂದು ರಾಜ್ಯ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಸಾಮಾನ್ಯ ವರ್ಗದ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಒತ್ತಾಯಿಸಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಮೀಪ ಗುರುವಾರ ಧರಣಿ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.

ಇದೇವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ್ ನಾಯಕ, ‘ಬಡ್ತಿಯಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಜಾರಿ ಸಂಬಂಧಿಸಿ ರಾಜ್ಯ ಸರ್ಕಾರವು 1978ರಲ್ಲಿ ನಿಯಮ ರೂಪಿಸಿತು. ಇದರಿಂದ ಹೆಚ್ಚಿನ ಸಂಖ್ಯೆಯ ಬಡ್ತಿ ಹುದ್ದೆಗಳು ಅವರಿಗೇ ಸಿಗುತ್ತಿದ್ದು, ಇತರರಿಗೆ ಅನ್ಯಾಯವಾಗುತ್ತಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು. 

ಇದರ ವಿರುದ್ಧ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕಳೆದ ವರ್ಷ ಫೆಬ್ರುವರಿಯಲ್ಲಿ ವೇಗೋತ್ಕರ್ಷಕ ಜ್ಯೇಷ್ಠತೆ ನೀಡಲಾಗದು ಎಂದು ತಿಳಿಸಿತ್ತು. ಅಲ್ಲದೇ ತನ್ನ ಆದೇಶವನ್ನು ಆರು ತಿಂಗಳ ಒಳಗೆ ಜಾರಿ ಮಾಡಲು ಸೂಚಿಸಿತ್ತು. ಆದರೆ, ಸರ್ಕಾರ ಇನ್ನೂ ಮೀನಮೇಷ ಎಣಿಸುತ್ತಿರುವುದರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಆದೇಶವನ್ನು ಅಸಿಂಧುಗೊಳಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಹೊಸ ಕಾಯ್ದೆಯನ್ನೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಅದರ ವಿಚಾರಣೆ ನಡೆಯುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಮೌಖಿಕವಾಗಿ ತಿಳಿಸಿದೆ. ಸರ್ಕಾರವು ಅದರಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ, ಸುಮಾರು 10 ಲಕ್ಷ ನಿವೃತ್ತ ಮತ್ತು ಕಾರ್ಯನಿರತ ನೌಕರರಿಂದ ಅಸಹಕಾರ ಚಳವಳಿ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ನಾಯಕ, ನಿವೃತ್ತ ಸರ್ಕಾರಿ, ಅರೆ ಸರ್ಕಾರಿ ನೌಕರರ ಹಿತರಕ್ಷಣಾ ಒಕ್ಕೂಟದ ಸದಸ್ಯರು ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !