ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ
Last Updated 6 ಏಪ್ರಿಲ್ 2021, 14:34 IST
ಅಕ್ಷರ ಗಾತ್ರ

ಕಾರವಾರ: ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಇಲಾಖೆಯ ನೌಕರರು ಏ.7ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲೂ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಪೊಲೀಸರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳೊಂದಿಗೆ (ಆರ್.ಟಿ.ಒ) ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳವಾರ ಸಭೆ ಹಮ್ಮಿಕೊಂಡರು.

ಸಭೆಯಲ್ಲಿ ಮಾತನಾಡಿದ ಅವರು, ‘ಮುಷ್ಕರದ ಕಾರಣ ಜನರಿಗೆ ತೊಂದರೆ ಆಗಬಹುದು. ಹೀಗಾಗಿ ಕೆ.ಎಸ್‍.ಆರ್‌.ಟಿ.ಒ ಹಾಗೂ ಆರ್.ಟಿ.ಒ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಲ್ಲಿ ಕಾರ್ಯ ನಿರ್ವಹಿಸಬೇಕು. ಪೊಲೀಸ್ ಭದ್ರತೆಯಲ್ಲಿ ಬಸ್‍ಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು. ಒಂದುವೇಳೆ ಕೆ.ಎಸ್‍.ಆರ್‌.ಟಿ.ಸಿ ಬಸ್‍ಗಳು ಲಭ್ಯವಿಲ್ಲದಿದ್ದರೆ, ಅಗತ್ಯವಿರುವಲ್ಲಿಗೆ ಖಾಸಗಿ ಮ್ಯಾಕ್ಸಿ ಕ್ಯಾಬ್, ಟೆಂಪೊ ಟ್ರಾವೆಲ್ಸ್ ಬಳಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಖಾಸಗಿ ವಾಹನಗಳ ಸಂಚಾರಕ್ಕೆ ಆರ್.ಟಿ.ಒ ಅಧಿಕಾರಿಗಳು ತಾತ್ಕಾಲಿಕ ಸಂಚಾರ ಪರವಾನಗಿ ನೀಡಬೇಕು’ ಎಂದು ಸೂಚಿಸಿದರು.

ಕೆ.ಎಸ್.ಆರ್.ಟಿ.ಸಿ.ಯ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜಕುಮಾರ್ ಮಾತನಾಡಿ, ‘ಜಿಲ್ಲೆಯಲ್ಲಿ ಈಗಾಗಲೇ 290 ಬಸ್‍ಗಳ ಸಂಚಾರವಿದೆ. ನೌಕರರ ಮುಷ್ಕರದಿಂದ ಎಲ್ಲ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದಂತೆ, ಸಂಸ್ಥೆಯ ನೌಕರರ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಅವಶ್ಯಕತೆಗೆ ಅನುಗುಣವಾಗಿ ಬಸ್‍ಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ತೊಂದರೆ ಮಾಡಿದರೆ ಕ್ರಮ’:

‘ಪ್ರತಿಭಟನೆ, ಮುಷ್ಕರದ ಸಂದರ್ಭದಲ್ಲಿ ಎಲ್ಲೆಮೀರಿ ನಡೆದುಕೊಳ್ಳಲು ಅವಕಾಶವಿಲ್ಲ. ಯಾರಾದರೂ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ‘ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಮುಕ್ತ ಸಂಚಾರಕ್ಕೆ ಪ್ರತಿಯೊಬ್ಬರೂ ಅನುವು ಮಾಡಿಕೊಡಬೇಕು. ಒಂದುವೇಳೆ ಮುಷ್ಕರದ ನೆಪದಲ್ಲಿ ಯಾರಾದರೂ ತೊಂದರೆ ಮಾಡಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಆರ್.ಟಿ.ಒ ಅಧಿಕಾರಿ ರಾಮಕೃಷ್ಣ ರೈ, ಕೆ.ಎಸ್‍.ಆರ್‌.ಟಿ.ಸಿ ಹಾಗೂ ಖಾಸಗಿ ವಾಹನಗಳ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT