ಸೋಮವಾರ, ಸೆಪ್ಟೆಂಬರ್ 20, 2021
20 °C

ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ನಗರದಿಂದ ಕುಮಟಾವರೆಗಿನ ರಾಜ್ಯ ಹೆದ್ದಾರಿಯನ್ನು ಸಾಗರಮಾಲಾ ಯೋಜನೆಯಡಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ (ಎನ್.ಎಚ್ 766 ಇ). ಈ ಸಂಬಂಧ ಕಾಮಗಾರಿ ಕೈಗೆತ್ತಿಕೊಳ್ಳಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಅನುಮತಿ ನೀಡಿದೆ.

ಸಚಿವಾಲಯದ ಅನುಮತಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 2018ರಿಂದಲೂ ಪ್ರಯತ್ನ ನಡೆಸಿತ್ತು. ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಪರಿಸರ ಸೂಕ್ಷ್ಮ ವಲಯವಾಗಿರುವ ದೇವಿಮನೆ ಘಟ್ಟದಲ್ಲಿ 10 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಬೇಕಿಗಿದೆ. ಈ ಪ್ರಮಾಣವನ್ನು ಕಡಿಮೆ ಮಾಡಲು ಈಗಿರುವ ರಸ್ತೆಯನ್ನು ಹೆಚ್ಚು ವಿಸ್ತರಿಸದಂತೆ ಅರಣ್ಯ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಷರತ್ತು ವಿಧಿಸಿತ್ತು. ಹೀಗಾಗಿ ಪ್ರಾಧಿಕಾರವು ಪರಿಷ್ಕೃತ ಯೋಜನೆ ಸಿದ್ಧಪಡಿಸಿ ಸರ್ವೆ ಕಾರ್ಯ ನಡೆಸಿ ಮರುಪ್ರಸ್ತಾವ ಸಲ್ಲಿಸಿತ್ತು. ಇದಕ್ಕೆ ನಾಲ್ಕು ದಿನಗಳ ಹಿಂದೆ ಅನುಮತಿ ದೊರೆತಿದೆ ಎಂದು ಶಿರಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಸ್ಪಷ್ಟಪಡಿಸಿದರು.

ಶಿರಸಿಯ ಐದು ರಸ್ತೆ ವೃತ್ತದಿಂದ ಕುಮಟಾದ ದೀವಗಿ ಸೇತುವೆವರೆಗೆ 60 ಕಿಲೋಮೀಟರ್ ರಸ್ತೆ ಅಭಿವೃದ್ಧಿಯಾಗಲಿದೆ. ಇದಕ್ಕೆ ₹ 440 ಕೋಟಿ ಸಾಗರಮಾಲಾ ಯೋಜನೆಯಲ್ಲಿ ಮಂಜೂರಾಗಿದೆ. 2017ರಲ್ಲಿಯೇ ಕಾಮಗಾರಿ ನಡೆಸಲು ಟೆಂಡರ್ ಪ್ರಕ್ರಿಯೆಯೂ ನಡೆದಿತ್ತು. ಆದರೆ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅನುಮತಿ ಸಿಗದ ಕಾರಣ ವಿಳಂಬವಾಗಿತ್ತು.

ಕುಮಟಾ–ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಚಿವಾಲಯ ಅನುಮತಿ ನೀಡಿರುವುದು ಸ್ವಾಗತಾರ್ಹ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು