ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿಯಲ್ಲಿ ಸ್ಪರ್ಧಿಸಿದ್ದ ಭೀಮಣ್ಣಗೆ ಯಲ್ಲಾಪುರ ಟಿಕೆಟ್‌: ಏನಿದು ಕೈ ತಂತ್ರ?

Last Updated 1 ಡಿಸೆಂಬರ್ 2019, 12:45 IST
ಅಕ್ಷರ ಗಾತ್ರ

ಶಿರಸಿ: ಉಪಚುನಾವಣೆಗೆ ಸಾಕಷ್ಟು ಪೂರ್ವಸಿದ್ಧತೆ ಮಾಡಿಕೊಂಡಿರುವ ಕಾಂಗ್ರೆಸ್, ಅಭ್ಯರ್ಥಿಯ ಹೆಸರು ಘೋಷಣೆಯಲ್ಲೂ ಮುಂಚೂಣಿ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಅವರ ಹೆಸರನ್ನು ಗುರುವಾರ ಪ್ರಕಟಿಸಿದೆ.

ಒಂದು ದಶಕದಿಂದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಭೀಮಣ್ಣ ಅವರು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಪರಿಚಿತರು. 2018ರ ವಿಧಾನಸಭಾ ಚುನಾವಣೆಯಲ್ಲಿ ಶಿರಸಿ–ಸಿದ್ದಾಪುರ ಕ್ಷೇತ್ರ ಅಭ್ಯರ್ಥಿಯಾಗಿದ್ದ ಅವರು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಪರಾಭವಗೊಂಡಿದ್ದರು.

ಯಾವ ಲೆಕ್ಕಾಚಾರದಲ್ಲಿ ಟಿಕೆಟ್ ? ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಶಿವರಾಮ ಹೆಬ್ಬಾರ್ ಅವರನ್ನು ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ರಮೇಶಕುಮಾರ್ ಅವರು ಅನರ್ಹಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.

ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಭೀಮಣ್ಣ ಅವರಿಗೆ ಯಲ್ಲಾಪುರ ಕ್ಷೇತ್ರ ಪರಿಚಿತ. ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹಿಂದಿನ ಚುನಾವಣೆಯಲ್ಲಿ ಶಿವರಾಮ ಹೆಬ್ಬಾರ್ ಪರ ಪ್ರಚಾರ ನಡೆಸಿದ್ದರು. ಯಲ್ಲಾಪುರ, ಮುಂಡಗೋಡ, ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿಯನ್ನು ಒಳಗೊಂಡಿರುವ ವಿಧಾನಸಭಾ ಕ್ಷೇತ್ರದಲ್ಲಿ ನಾಮಧಾರಿ, ಹಿಂದುಳಿದ ವರ್ಗಗಳ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಈ ಕಾರಣದಿಂದ ಭೀಮಣ್ಣ ಹೆಸರು ಅಂತಿಮಗೊಂಡಿದೆ ಎಂಬುದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ.

ಈ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಪುತ್ರ ಪ್ರಶಾಂತ ದೇಶಪಾಂಡೆ, ಯುವ ಧುರೀಣ ದೀಪಕ ದೊಡ್ಡೂರು, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಹೆಸರು ಮುಂಚೂಣಿಯಲ್ಲಿತ್ತು.

‘ಉಪಚುನಾವಣೆಗೆ ನನ್ನ ಹೆಸರು ಅಂತಿಮಗೊಳಿಸಿರುವ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈಗಾಗಲೇ ಎರಡು ಬಾರಿ ಕಾಂಗ್ರೆಸ್‌ನಿಂದ ಗೆದ್ದು, ಪಕ್ಷದ್ರೋಹ ಮಾಡಿರುವ ಶಿವರಾಮ ಹೆಬ್ಬಾರ್ ಅವರಿಗೆ, ಉಪಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸಲಿದ್ದಾರೆ’ ಎಂದು ಭೀಮಣ್ಣ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT