ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿಯೇ ಲಸಿಕೆ ಪಡೆದ ಮೇಲೆ ಜನರಿಗೆ ಭಯವೇಕೆ: ಡಾ. ಕೆ. ಸುಧಾಕರ್

ಮೂರನೆ ಹಂತದ ಕೊರೊನಾ ಲಸಿಕೆಗೆ ಚಾಲನೆ
Last Updated 1 ಮಾರ್ಚ್ 2021, 9:39 IST
ಅಕ್ಷರ ಗಾತ್ರ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ಪಡೆದಿದ್ದು, ಜನಸಾಮಾನ್ಯರ ಆತಂಕ ದೂರ ಮಾಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ‌‌ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಹಾಗೂ 45 ರಿಂದ 59 ವರ್ಷದವರೆಗಿನ ಕಾಯಿಲೆ ಪೀಡಿತರಿಗೆ ಕೊರೊನಾ ಲಸಿಕೆ ನೀಡುವ ಮೂರನೆ ಹಂತದ ರಾಜ್ಯಮಟ್ಟದ ಅಭಿಯಾನಕ್ಕೆ ಚಾಲನೆ ನೀಡಿದ ಅವರು, 'ರಾಜ್ಯದಲ್ಲಿ 270ಕ್ಕೂ ಹೆಚ್ಚು ಲಸಿಕಾ ಕೇಂದ್ರ ತೆರೆಯಲಾಗಿದೆ. ಸುಮಾರು 50 ಲಕ್ಷ ಹಿರಿಯ ನಾಗರಿಕರಿದ್ದಾರೆ. 16 ಲಕ್ಷಕ್ಕೂ ಹೆಚ್ಚು ಜನರು ಇತರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇವರೆಲ್ಲರೂ ಲಸಿಕೆ ಪಡೆದರೆ ಕೊರೊನಾ ನಿಯಂತ್ರಣಕ್ಕೆ ಸುಲಭವಾಗಲಿದೆ, ಜನರು ತಪ್ಪು ಸಂದೇಶ, ಸುಳ್ಳು ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಬೇಕು' ಎಂದರು.

'ಆರೋಗ್ಯ ಇಲಾಖೆಯಲ್ಲಿ ಕಾಯಂ ನೇಮಕಾತಿಗೆ ಆದ್ಯತೆ ನೀಡಲಾಗುವುದು. ಮಾನವ ಸಂಪನ್ಮೂಲ ಹೆಚ್ಚಿಸಲಾಗುವುದು' ಎಂದರು. ರಾಜ್ಯದ ಗ್ರಾಮೀಣ ಪ್ರದೇಶದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ. 2180 ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರಕ್ರಿಯೆ ಪೂರ್ಣಗೊಂಡಿದೆ. ಕೆಲ ವೈದ್ಯರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಕಾನೂನು ತೊಡಕು ನಿವಾರಿಸಿ ಆದಷ್ಟು ಶೀಘ್ರ ನೇಮಕಾತಿ ಮಾಡಲಾಗುವುದು ಎಂದರು.

ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ವಿಶೇಷ ಭತ್ಯೆ, ಸೌಲಭ್ಯ ನೀಡಲು ಚಿಂತಿಸಲಾಗುತ್ತಿದೆ ಎಂದರು. ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಯಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಡಿ ಕಾಲೇಜುಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಆಶಾ, ಆರೋಗ್ಯ ಕಾರ್ಯಕರ್ತೆಯರು ಪರಿಣಾಮಕಾರಿ ಕೆಲಸ ಮಾಡಿದ್ದಾರೆ. ಜನ ಮತ್ತಷ್ಟು ಎಚ್ಚರದಿಂದ ಇರಬೇಕು ಎಂದರು.

ಆಧುನಿಕ ಜೀವನ ಶೈಲಿಯಿಂದ ಜನ ರೋಗಪೀಡಿತರಾಗುತ್ತಿರುವುದು ಆತಂಕದ ವಿಚಾರ. ಆರೋಗ್ಯ ಸುರಕ್ಷಿತವಾಗಿಟ್ಟುಕೊಳ್ಳುವುದು ಮೊದಲ ಆದ್ಯತೆಯಾಗಬೇಕು. ಆರೋಗ್ಯದ ಬಗ್ಗೆ ಸದನದಲ್ಲಿ ವಿಶೇಷ ಚರ್ಚೆ ನಡೆಸುವ ಚಿಂತನೆ ಇದೆ ಎಂದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡ್ಮನಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ಜಿಲ್ಲಾಧಿಕಾರಿ ಮುಲೈ ಮುಹಿಲನ್, ಜಿಲ್ಲಾ ಪಂಚಾಯ್ತಿ ಸಿಇಓ ಎಂ.ಪ್ರಿಯಾಂಕಾ, ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಪಂಡಿತ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗಜಾನನ ಭಟ್ಟ ಇದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ ನಾಯಕ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT