ಸೋಮವಾರ, ಆಗಸ್ಟ್ 2, 2021
20 °C
ಸಮುದ್ರದಲ್ಲಿ ಸ್ನಾನಕ್ಕೆ ಸಂಪೂರ್ಣ ನಿಷೇಧ ಹೇರಿ ಆದೇಶ

‘ಮನೆಯಲ್ಲೇ ಹೋಳಿ ಆಚರಣೆ ಮಾಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ಹೋಳಿ ಹಬ್ಬವನ್ನು ಸಾರ್ವಜನಿಕವಾಗಿ, ಸಾಮೂಹಿಕವಾಗಿ ಆಚರಿಸುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಆಚರಿಸಬಹುದು. ಸಮುದ್ರಕ್ಕೆ ಸಾಮೂಹಿಕವಾಗಿ ಹೋಗಿ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

‘ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿ. ಹಾಗಾಗಿ ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೇ, ಯುಗಾದಿ ಹಬ್ಬಗಳ ಸಂದರ್ಭದಲ್ಲಿ ಹೆಚ್ಚು ಜನ ಸೇರಿದರೆ ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಇದನ್ನು ತಡೆಯಲು ಜನರ ಸಹಕಾರ ಅಗತ್ಯ. ಈ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ನಿರ್ಬಂಧ ವಿಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರಸಭೆ ಆದೇಶ: ಹೋಳಿ ಹಬ್ಬದ ಸಂದರ್ಭದಲ್ಲಿ ನಗರದ ಸಮುದ್ರತೀರದಲ್ಲಿ ಸಾಮೂಹಿಕವಾಗಿ ಸ್ನಾನ ಮಾಡುವುದನ್ನು ನಿಷೇಧಿಸಿ ನಗರಸಭೆ ಪೌರಾಯುಕ್ತರು ಆದೇಶಿಸಿದ್ದಾರೆ.

ಮಾರ್ಚ್ 28ರಂದು ಕಾರವಾರದಲ್ಲಿ ನಡೆಯುವ ಸಂತೆ ಮಾರುಕಟ್ಟೆಗೆ ಬರುವ ಎಲ್ಲರೂ ಮುಖಗವಸು ಕಡ್ಡಾಯವಾಗಿ ಧರಿಸಿರಬೇಕು. ನಗರದಲ್ಲಿರುವ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಹಾಗೂ ಗ್ರಾಹಕರು ಸೇರಿದಂತೆ ಎಲ್ಲ ಸಾರ್ವಜನಿಕರೂ ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗೊಂದಲ ಮೂಡಿಸಿದ ಪ್ರಕಟಣೆ:

‘ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಮತ್ತು ಸಂತೆಗೆ ಬರುವವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಕಾರವಾರ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರು ಮಾರ್ಚ್ 26ರಂದು ಜಂಟಿಯಾಗಿ ಸಾರ್ವಜನಿಕ ಪ್ರಕಟಣೆ ನೀಡಿದ್ದಾರೆ.

‘ನಿಯಮ ಉಲ್ಲಂಘಿಸಿದವರ ಮೇಲೆ ದಂಡ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005, ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ 2020ರ ಅನ್ವಯ  ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರವು ಸಾರ್ವಜನಿಕರಿಗೆ ಲಸಿಕೆಯನ್ನು ಕಡ್ಡಾಯಗೊಳಿಸದೇ ಸ್ವಯಂಪ್ರೇರಿತವಾಗಿ ಪಡೆದುಕೊಳ್ಳಬೇಕು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಾಗರಿಕರ ಮನವೊಲಿಕೆ ಮಾಡಬೇಕು ಎಂದು ತಿಳಿಸಿದೆ. ಆದರೆ, ಕಾರವಾರ ನಗರಸಭೆಯು ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಿರುವುದು ಗೊಂದಲ ಮೂಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು