ಬುಧವಾರ, ಜನವರಿ 27, 2021
18 °C

ಕಾರವಾರ: ಆರು ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ತಾಲೀಮಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕೋವಿಡ್ ಲಸಿಕೆಯ ತಾಲೀಮಿಗೆ ಜಿಲ್ಲೆಯ ಆರು ಕೇಂದ್ರಗಳಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಆವರಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ಚಾಲನೆ ನೀಡಿದರು.

ಸಂಸ್ಥೆಯಲ್ಲಿ ಹಮ್ಮಿಕೊಂಡ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

'ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೊರೊನಾ ಯೋಧರಿಗೆ ಮೊದಲು ಲಸಿಕೆ ನೀಡಲಾಗುತ್ತದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 12 ಸಾವಿರ ಸಿಬ್ಬಂದಿ ಜಿಲ್ಲೆಯಲ್ಲಿದ್ದಾರೆ' ಎಂದು ತಿಳಿಸಿದರು.

'ಎರಡನೇ ಹಂತದಲ್ಲಿ, ಕೊರೊನಾ ಯೋಧರಿಗೆ ಪೂರಕವಾಗಿ ಕೆಲಸ ಮಾಡುವವರಿಗೆ ಲಸಿಕೆ ನೀಡಲಾಗುತ್ತದೆ. ಪೊಲೀಸರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮುಂತಾದವರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಒಂದು ದಿನಕ್ಕೆ 100 ಜನರು ಬಂದು ಹೋಗಲು ಸಾಧ್ಯವಿರುವಂಥ ವ್ಯವಸ್ಥೆಯಿರುವುದು ಅಗತ್ಯ' ಎಂದರು.

'ಮೂರನೇ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲಾಗುತ್ತದೆ. ಸರ್ಕಾರ ರೂಪಿಸಿದ ಡಿಜಿಟಲ್ ನೋಂದಣಿ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಣಿಗೆ ನೀಡಿದ ಗುರುತಿನ ಚೀಟಿಯನ್ನೇ ಲಸಿಕೆ ಹಾಕಿಸಿಕೊಳ್ಳಲು ಬರುವಾಗಲೂ ತರಬೇಕು.  ನೋಂದಣಿ ಸಂದರ್ಭದಲ್ಲಿ ತಿಳಿಸಿದ ದಿನಾಂಕದಂದೇ ಹಾಜರಾಗಬೇಕು' ಎಂದು ಸೂಚಿಸಿದರು.

'ಮೂರು ಕೊಠಡಿಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಚುನಾವಣೆಯ ಸಂದರ್ಭದಲ್ಲಿ ಅನುಸರಿಸುವ ಮಾದರಿಯನ್ನೇ ಇಲ್ಲೂ ಪಾಲಿಸಲಾಗುತ್ತದೆ' ಎಂದು ವಿವರಿಸಿದರು.

40 ಶಿಕ್ಷಕರಿಗೆ ಕೋವಿಡ್: ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 10 ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಮಾರು 30 ಶಿಕ್ಷಕರಿಗೆ ಕೋವಿಡ್ ದೃಢಪಟ್ಟಿದೆ. ಆದರೆ, ಅವರಿಗೆ ಮೊದಲೇ ಪರೀಕ್ಷೆ ಮಾಡಲಾಗಿತ್ತು. ಶಾಲೆ ಶುರುವಾದ ಬಳಿಕ ಸೋಂಕಿತರಾಗಿದ್ದಲ್ಲ. ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದ ಬಳಿಕವೇ ಕರ್ತವ್ಯಕ್ಕೆ ಸೇರಿಸಿಕೊಳ್ಳಲಾಗುತ್ತದೆ' ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

'ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳಿದ್ದರೆ ಮಾತ್ರ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. 48 ಗಂಟೆಗಳ ಒಳಗೆ ವರದಿ ಕೊಡುವಂತೆ ಪ್ರಯೋಗಾಯಕ್ಕೆ ಸೂಚಿಸಲಾಗಿದೆ. ಆದರೆ, ಮಕ್ಕಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ.
ಹಾಸ್ಟೆಲ್ ಪ್ರವೇಶ ಪಡೆಯುವ ಮೊದಲು ಮಗು ಕೋವಿಡ್ ನೆಗೆಟಿವ್ ಪತ್ರ ತರುವುದು ಕಡ್ಡಾಯ' ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರದ್ ನಾಯಕ, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ರಮೇಶ ರಾವ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತಲಕರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು