ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಕಾರವಾರ ಬಂದರಿನಲ್ಲಿ ಹೈ ಅಲರ್ಟ್

‘ಕೋವಿಡ್ 19’ ವೈರಾಣು ಸೋಂಕು: ಜಿಲ್ಲಾ ಆಸ್ಪತ್ರೆಗೆ ನೌಕಾನೆಲೆಯಿಂದ 100 ಹಾಸಿಗೆ
Last Updated 5 ಮಾರ್ಚ್ 2020, 13:08 IST
ಅಕ್ಷರ ಗಾತ್ರ

ಕಾರವಾರ: ‘ಕೋವಿಡ್ 19’ ವೈರಾಣು ಸೋಂಕು ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಜಾರಿ ಮಾಡಿದೆ.ಕಾರವಾರ ವಾಣಿಜ್ಯ ಬಂದರು ಸೇರಿದಂತೆ ಜಿಲ್ಲೆಯ ಎಲ್ಲ ಪ್ರವಾಸಿ ಸ್ಥಳಗಳಲ್ಲಿ ಕಟ್ಟೆಚ್ಚರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ ಸೂಚಿಸಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಸ್ಪತ್ರೆಯ ಮುಖ್ಯಸ್ಥರು, ವೈದ್ಯಕೀಯ ಕಾಲೇಜು ಮುಖ್ಯಸ್ಥರು, ನೌಕಾ ನೆಲೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಕಾರವಾರ ವಾಣಿಜ್ಯ ಬಂದರಿಗೆ ವಿದೇಶಗಳಿಂದ ಹಡಗುಗಳು ಬರುತ್ತವೆ. ಹಾಗಾಗಿ ಮುಖ್ಯವಾಗಿ ಅಲ್ಲಿ ತೀವ್ರ ನಿಗಾ ಇರಿಸಬೇಕು. ಹಡಗಿನ ಸಿಬ್ಬಂದಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಬೇಕು. ಇದರ ಮಾಹಿತಿಯನ್ನು ಪ್ರತಿ ದಿನ ಜಿಲ್ಲಾ ಆರೋಗ್ಯ ಅಧಿಕಾರಿಗಳು ಪಡೆದುಕೊಂಡ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ‘ಗೋಕರ್ಣಕ್ಕೆ ವಿದೇಶಿ ಪ್ರವಾಸಿಗರು ಬರುವ ಕಾರಣ ಅಲ್ಲಿ ವೈದ್ಯರು ತಂಡ ರಚಿಸಿಕೊಂಡು ಮನೆ ಮನೆಗೆ ಭೇಟಿ ಮಾಡಬೇಕು. ಕೋವಿಡ್ ವೈರಾಣು ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ‘ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳಬಹುದಾದ ಎಲ್ಲ ಮುಂಜಾಗ‌್ರತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಗೋವಾ ಮತ್ತು ಮಂಗಳೂರು ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರನ್ನು ವೈದ್ಯರ ಸಹಾಯದೊಂದಿಗೆ ತಪಾಸಣೆ ಮಾಡುವ ಮೂಲಕ ಹೆಚ್ಚಿನ ಜಾಗೃತಿ ವಹಿಸಲಾಗುವುದು’ ಎಂದರು.

ನಾವಿಕರ ವೈದ್ಯಕೀಯ ತಪಾಸಣೆ: ‘ನೌಕಾನೆಲೆಯಲ್ಲಿ ರೋಗಿಗಳ ಆರೈಕೆಗಾಗಿ ಸಾಕಷ್ಟು ಹಾಸಿಗೆಗಳ ವ್ಯವಸ್ಥೆ ಇದೆ. ಹಾಗಾಗಿ, ಜಿಲ್ಲಾ ಆಸ್ಪತ್ರೆಗೆ 100 ಹಾಸಿಗೆಗಳನ್ನು ನೀಡಲು ಸಿದ್ಧವಿದೆ’ ಎಂದು ಸೀಬರ್ಡ್ ನೌಕಾನೆಲೆಯ ಅಧಿಕಾರಿ ಮಾಹಿತಿ ನೀಡಿದರು.

‘ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದೇಶದಿಂದ ಬರುವ ಹಡಗುಗಳಲ್ಲಿರುವ ಪ್ರಯಾಣಿಕರು ಮತ್ತು ನಾವಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುಂಚಿತವಾಗಿಯೇ ಎಲ್ಲ ಹಡುಗುಗಳಲ್ಲಿ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ’

ಸಭೆಯಲ್ಲಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT