ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಬೀಜ ಮಾರಾಟ: ಕಟ್ಟುನಿಟ್ಟಿನ ಕ್ರಮ

ಅಧಿಕಾರಿಗಳಿಗೆ ಸೂಚನೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ಸೂಚನೆ
Last Updated 4 ಮೇ 2020, 11:43 IST
ಅಕ್ಷರ ಗಾತ್ರ

ಶಿರಸಿ: ಕಳಪೆ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಮತ್ತು ಆ ನಿರ್ದಿಷ್ಟ ಅಂಗಡಿಯ ಪರವಾನಗಿ ರದ್ದುಗೊಳಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹ ಸಂಬಂಧ ಮಾಹಿತಿ ಪಡೆಯಲು ಸೋಮವಾರ ಇಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ಐ.ಸಿ.ಸಿ.ಎ.ನಲ್ಲಿ ನೋಂದಣಿಯಾಗದ ಕಂಪನಿಗಳು ಔಷಧ ಮಾರಾಟ ಮಾಡುವಂತಿಲ್ಲ. ನೋಂದಣಿಯಾಗದೇ ಔಷಧ ಮಾರಾಟ ಮಾಡುವ, ಅವಧಿ ಮೀರಿದ ಔಷಧಕ್ಕೆ ಹೊಸ ಲೇಬಲ್ ಅಂಟಿಸಿ ಮಾರಾಟ ಮಾಡುವ ಅಂಗಡಿಗಳನ್ನು ಮುಟ್ಟುಗೋಲು ಹಾಕಬೇಕು. ಬಿತ್ತನೆ ಬೀಜಗಳ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೇ ತೀವ್ರ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜಕ್ಕೆ ಏಕರೂಪದ ಬೆಲೆ ನಿಗದಿಪಡಿಸಬೇಕಾಗಿದೆ. ಬರುವ ದಿನಗಳಲ್ಲಿ ಸರ್ಕಾರವೇ ಈ ದರ ನಿಗದಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಿದೆ ಎಂದರು.

ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗುವುದಿಲ್ಲ ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ, ‘ಬೆಳೆವಿಮೆ ವಿಚಾರದಲ್ಲಿ ಪಾರದರ್ಶಕತೆ ತರಬೇಕಾದ ತುರ್ತು ಅಗತ್ಯವಿದೆ. ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕಾ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದ್ದು, ಈ ಕ್ಷೇತ್ರದ ಪುನರುಜ್ಜೀವನ ಆಗಬೇಕಾಗಿದೆ’ ಎಂದರು.

ಹೊನ್ನಾವರ, ಅಂಕೋಲಾ, ಕಾರವಾರ ತಾಲ್ಲೂಕುಗಳಲ್ಲಿ ಬೆಳೆದ ಕಲ್ಲಂಗಡಿ ಹಣ್ಣಿಗೆ ಸರಿಯಾದ ಬೆಲೆ ದೊರೆಯದೇ, ರೈತರು ನಷ್ಟ ಅನುಭವಿಸಿದ್ದಾರೆ. ಸರ್ಕಾರದಿಂದ ಪರಿಹಾರ ಕೊಡಿಸಲು ಯತ್ನಿಸಬೇಕು ಎಂದು ಶಾಸಕರಾದ ರೂಪಾಲಿ ನಾಯ್ಕ, ಸುನೀಲ ನಾಯ್ಕ ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ್ ಮಾತನಾಡಿ, ‘ಅಕಾಲಿಕ ಮಳೆಗೆ ಹಳಿಯಾಳದಲ್ಲಿ ಆಪೂಸ್ ಮಾವು ನೆಲಕಚ್ಚಿದೆ. ಸರ್ಕಾರದಿಂದ ರೈತರಿಗೆ ಪರಿಹಾರ ಒದಗಿಸಬೇಕು. ರಸಗೊಬ್ಬರ ಕಳ್ಳದಂಧೆ ಆರಂಭವಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು’ ಎಂದರು.

ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಮಾತನಾಡಿ, ‘ಕೊರೊನಾಮುಕ್ತವಾಗಿರುವ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಈ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ರೋಶನ್ ಮಾಹಿತಿ ನೀಡಿ, ‘ಲಾಕ್‌ಡೌನ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಒದಗಿಸಲು ಜಿಲ್ಲಾಡಳಿತ, ಹೊರ ರಾಜ್ಯ, ಹೊರ ಜಿಲ್ಲೆಗಳ ಜೊತೆ ಸಂಪರ್ಕ ಸಾಧಿಸಿ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದೆ. ಆದರೂ, ನಿರೀಕ್ಷಿತ ದರ ದೊರೆಯದ ಕಾರಣ ರೈತರಿಗೆ ಸ್ವಲ್ಪ ನಷ್ಟವಾಗಿದೆ’ ಎಂದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಬಸವರಾಜ ದೊಡ್ಮನಿ, ಜಿ.ಎನ್.ಹೆಗಡೆ, ಉಷಾ ಹೆಗಡೆ, ಎಸ್ಪಿ ಶಿವಪ್ರಕಾಶ ದೇವರಾಜು, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಇದ್ದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಇಲಾಖೆ ವರದಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT