ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ವಿಧಿಸಿ ಮರಳು ಬಳಸಲು ಅವಕಾಶ ಕೊಡಿ: ಸಚಿವ ಕೋಟ

ವಿವಿಧ ಇಲಾಖೆಗಳ ಪ್ರಗತಿ ಪ‍ರಿಶೀಲನಾ ಸಭೆ
Last Updated 4 ಮೇ 2022, 12:57 IST
ಅಕ್ಷರ ಗಾತ್ರ

ಕಾರವಾರ: ‘ಸ್ಥಳೀಯವಾಗಿ ಸಿಗುವ ಮರಳನ್ನು ನಿಗದಿತ ಶುಲ್ಕ ವಿಧಿಸಿ ಬಳಸಿಕೊಳ್ಳಲು ಅವಕಾಶ ನೀಡಬೇಕು. ಈ ವಿಚಾರದಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಮೇ 11ರಂದು ಸಭೆ ನಡೆಸಿ ವರದಿ ಸಲ್ಲಿಸಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪ‍ರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

‘ಕಾನೂನು ಚೌಕಟ್ಟಿನೊಳಗೆ ಜನರಿಗೆ ಮರಳು ತೆಗೆಯುವ ಪರವಾನಗಿ ನೀಡಬೇಕು. ಆ ಮೂಲಕ ಸರ್ಕಾರದ ಯೋಜನೆಗಳು ಹಾಗೂ ಸಾಮಾನ್ಯ ಜನರ ಕಟ್ಟಡ ಸಂಬಂಧಿತ ಕಾರ್ಯಗಳು ಸುಗಮವಾಗಿ ಪೂರ್ಣಗೊಳ್ಳಲು ಸಹಕರಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯು ಹೇರಳ ಜಲಸಂಪನ್ಮೂಲವನ್ನು ಹೊಂದಿದೆ. ಮೀನುಗಾರಿಕೆಗೆ ಪ್ರಾಶಸ್ತ್ಯ ನೀಡಿ ಮೀನು ಉತ್ಪಾದನೆ ಮತ್ತು ಮಾರಾಟದಲ್ಲಿ ಅಭಿವೃದ್ಧಿಯಾಗಬೇಕು. ಮೀನುಗಾರರಿಗೆ ಸಬ್ಸಿಡಿಯಲ್ಲಿ ಇಂಧನ, ದೋಣಿ ನೀಡುವ ಯೋಜನೆಯು ಹೆಚ್ಚಿನ ಪ್ರಮಾಣದಲ್ಲಿ ಸಾಕಾರವಾಗಬೇಕು. ಮೀನುಗಾರಿಕೆಯ ಹಿನ್ನೆಲೆಯಿರುವ ಕುಟುಂಬಗಳ ಯುವಕರಿಗೆ ತರಬೇತಿ ನೀಡಿ ಸ್ವ ಉದ್ಯೋಗ ಕೈಗೊಳ್ಳಲು ಮಾರ್ಗದರ್ಶನ ನೀಡಬೇಕು’ ಎಂದರು.

ವರದಿ ಸಲ್ಲಿಸಲು ಸೂಚನೆ:‘ಕೆರೆಗಳ ನಿರ್ವಹಣೆ ಕುರಿತು ಯುವಕರಿಗೆ ತರಬೇತಿ ನೀಡಬೇಕು. ಕೆರೆ ಹೂಳೆತ್ತಿ ಮೀನುಗಾರಿಕೆಯಲ್ಲಿ ಉತ್ಪಾದನೆ ಹೆಚ್ಚುವಂತೆ ಮಾಡಬೇಕು. ಮೀನುಗಾರರಿಗೆ ಕಿಸಾನ್ ಕಾರ್ಡ್, ದೋಣಿ ನೀಡಬೇಕು. ಕೆರೆ, ಕಿಂಡಿ ಅಣೆಕಟ್ಟೆ, ಜಲಾಶಯಗಳನ್ನು ಬಳಸಿಕೊಂಡು ಮೀನುಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ನೀಡುವ ಮೂಲಕ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ಬೇಕಾದ ಸಂಪನ್ಮೂಲಗಳ ಖರ್ಚು ವೆಚ್ಚದ ವರದಿ ತಯಾರಿಸಿ ಸಲ್ಲಿಸಿ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗಾ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೆಕರ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

*
ಅಲಗೇರಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಯೋಜನೆಯಿಂದ ಬಾಧಿತರಿಗೆ ಬೇರೆ ಜಾಗ, ನಿವೇಶನ ನೀಡುವಲ್ಲಿ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT