ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಶ್ರಿತರನ್ನು ‘ರಾಷ್ಟ್ರೀಯ ಸಂತ್ರಸ್ತ’ರೆಂದು ಘೋಷಿಸಲು ಮನವಿ

ರಕ್ಷಣಾ ಸಚಿವರಿಗೆ ಶಾಸಕಿ ರೂಪಾಲಿ ಒತ್ತಾಯ
Last Updated 24 ಜೂನ್ 2021, 16:48 IST
ಅಕ್ಷರ ಗಾತ್ರ

ಕಾರವಾರ: ‘ಸೀಬರ್ಡ್ ನೌಕಾನೆಲೆಯ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು. ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್ ಯಾರ್ಡ್ ನಿರ್ಮಿಸಲು ಕ್ರಮ ಕೈಗೊಳ್ಳಬೇಕು’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಶಾಸಕಿ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದ್ದಾರೆ.

ಸಚಿವರನ್ನು ಗುರುವಾರ ‘ಸೀಬರ್ಡ್’ ನೌಕಾನೆಲೆಯಲ್ಲಿ ಭೇಟಿ ಮಾಡಿದ ಅವರು, ‘ಕಾರವಾರ ಹಾಗೂ ಅಂಕೋಲಾ ತಾಲ್ಲೂಕುಗಳ 4,604 ಕುಟುಂಬಗಳು ನೌಕಾನೆಲೆಯಿಂದ ನಿರಾಶ್ರಿತವಾಗಿವೆ. ಕೇವಲ 968 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ. ದೇಶಕ್ಕಾಗಿ ಸರ್ವಸ್ವನ್ನೂ ತ್ಯಾಗ ಮಾಡಿರುವ ಸಂತ್ರಸ್ತರು ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರ್ಪಡೆಯಾಗಬೇಕು. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಸೀಬರ್ಡ್ ನೌಕಾನೆಲೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನೌಕಾನೆಲೆಗೆ ಅಗತ್ಯ ಸಾಮಗ್ರಿಗಳ ತಯಾರಿಕೆಗೆ ಇಲ್ಲಿ ಯಾವುದೇ ಕೈಗಾರಿಕೆಗಳಿಲ್ಲ. ಸ್ಥಳೀಯರಿಗೆ ಉದ್ಯೋಗ ಕೊಡುವ ಕೈಗಾರಿಕೆಗಳೂ ಇಲ್ಲ. ಹೀಗಾಗಿ ಸರ್ಕಾರಿ ಸ್ವಾಮ್ಯದಲ್ಲಿ ರಕ್ಷಣಾ ಇಲಾಖೆ ನೌಕಾನೆಲೆಯಲ್ಲಿ ಶಿಪ್ ಯಾರ್ಡ್ ಹಾಗೂ ಪೂರಕ ಕೈಗಾರಿಕೆಗಳನ್ನು ಸ್ಥಾಪನೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದೂ ಮನವಿ ಮಾಡಿದರು.

‘ನೌಕಾನೆಲೆಗೆ ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿಯೇ ಉತ್ಪಾದಿಸಬಹುದು. ಕೈಗಾರಿಕೆಗಳು ಇಲ್ಲಿ ಬೆಳೆಯುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಇದರಿಂದ ಈ ಪ್ರದೇಶದ ಆರ್ಥಿಕ ಚಟುವಟಿಕೆಗಳು ಹೆಚ್ಚಲಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT