ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಜೆ.ಎಂ: ಜನರಿಗೆ ತಿಳಿವಳಿಕೆ ನೀಡಲು ಸೂಚನೆ

‘ದಿಶಾ’ ಸಭೆಯಲ್ಲಿ ಸಂಸದ ಅನಂತಕುಮಾರ ಹೆಗಡೆ
Last Updated 27 ಜೂನ್ 2022, 15:44 IST
ಅಕ್ಷರ ಗಾತ್ರ

ಕಾರವಾರ: ‘ಉದ್ಯೋಗ ಖಾತ್ರಿ ಹೊರತುಪಡಿಸಿ ಜಲಜೀವನ್ ಮಿಷನ್ ಯೋಜನೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಈ ಯೋಜನೆ ಯಶಸ್ವಿಯಾಗಲು ಜನರಿಗೆ ತಿಳಿವಳಿಕೆ ಹಾಗೂ ವ್ಯಾಪಕ ಪ್ರಚಾರ ನೀಡಬೇಕು. ಯೋಜನೆಯ ಕಾರ್ಯಾನುಷ್ಠಾನ ಗಂಭೀರವಾಗಿ ಆಗಬೇಕು’ ಎಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಉದ್ಯೋಗ ಖಾತ್ರಿ ಯೋಜನೆಯ ಧ್ಯೇಯೋದ್ದೇಶದ ಅಡಿಯಲ್ಲಿ ಸರ್ಕಾರದ ಆಸ್ತಿಯ ಸೃಜನೆಯಾಗಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡಲು ಆದ್ಯತೆ ನೀಡಬೇಕು. ಜನ ಗುಳೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿಕೊಳ್ಳಬೇಕು’ ಎಂದು ಸೂಚಿಸಿದರು.

ಶಿಕ್ಷಣ ಇಲಾಖೆಯ ಪ್ರಗತಿ ವರದಿ ಪರಿಶೀಲಿಸಿ, ‘ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ತಾಲ್ಲೂಕುವಾರು ಸಮಸ್ಯೆಗಳನ್ನು ಗುರುತಿಸಿ ವರದಿ ನೀಡಬೇಕು. ಅಕ್ಷರ ದಾಸೋಹದಲ್ಲಿ ಬಿಸಿಯೂಟದ ಗುಣಮಟ್ಟ ಕಾಪಾಡಿಕೊಳ್ಳಬೇಕು. ಎಸ್‍.ಎಂ.ಎಸ್ ಮೂಲಕ ದೂರು, ಸಲಹೆ ಸ್ವೀಕರಿಸಿದ ಅರ್ಜಿಗಳು ಇಲಾಖೆಯ ಕುರಿತು ಇರುವ ಆಶಾದಾಯಕ ಅಭಿಪ್ರಾಯಗಳನ್ನು ಸೂಚಿಸುತ್ತವೆ. ಗುಣಮಟ್ಟದ ವಿಚಾರದಲ್ಲಿ ರಾಜಿಯಾಗದೇ ಮಕ್ಕಳಿಗೆ ಬಿಸಿಯೂಟ ನೀಡಬೇಕು’ ಎಂದರು.

‘ಕೃಷಿ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಕಂಪನಿಗಳ ಸಹಭಾಗಿತ್ವದಲ್ಲಿ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ತಿಳಿಸಿದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾತೃವಂದನಾ ಯೋಜನೆಯು ಪ್ರಗತಿದಾಯಕವಾಗಬೇಕು. ಭೌತಿಕ ಹಾಗೂ ಅಂಕಿ ಸಂಖ್ಯೆಗಳ ವಿಚಾರದಲ್ಲಿ ಪರಿಷ್ಕೃತ ವರದಿಯನ್ನು ಸಲ್ಲಿಸಬೇಕು. ಸ್ವಚ್ಛ ಭಾರತ ಅಭಿಯಾನದಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಗತಿ ಆಶಾದಾಯಕವಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಶಾಸಕ ಸುನೀಲ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT