ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸಜ್ಜಿತ ಆಸ್ಪತ್ರೆ ಕುರಿತು ಶೀಘ್ರವೇ ತೀರ್ಮಾನ: ಸಚಿವ ಡಾ.ಸುಧಾಕರ್

Last Updated 25 ಜುಲೈ 2022, 11:27 IST
ಅಕ್ಷರ ಗಾತ್ರ

ಕಾರವಾರ: ‘ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳಿರುವ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಯಾಗಬೇಕು’ ಎಂಬ ಉತ್ತರ ಕನ್ನಡದ ಜನರ ಬೇಡಿಕೆಗೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ ಸರಣಿ ಟ್ವೀಟ್‌ಗಳನ್ನು ಪ್ರಕಟಿಸಿರುವ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ’ ಎಂದು ಪ್ರಕಟಿಸಿದ್ದಾರೆ.

‘ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಲಾಗುವುದು. ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಆಶ್ವಾಸನೆ ನೀಡಿದ್ದಾರೆ.

ಇದಕ್ಕೆ ಹಲವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ‘ಇಂತಹ ಭರವಸೆಗಳನ್ನು ಕೇಳಿ ಸಾಕಾಗಿದೆ. ಇದು ಚುನಾವಣಾ ಗಿಮಿಕ್ ಆಗದಿರಲಿ. ಆಶ್ವಾಸನೆಯನ್ನು ಈಡೇರಿಸಿ’ ಎಂದು ಆಗ್ರಹಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಸೌಲಭ್ಯಗಳ ಆಸ್ಪತ್ರೆ ಸ್ಥಾಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು, ಧರಣಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರ ಆಕ್ರೋಶ ಹೆಚ್ಚುತ್ತಿರುವುದನ್ನು ಗಮನಿಸಿದ ವಿವಿಧ ರಾಜಕೀಯ ಮುಖಂಡರು ಟ್ವೀಟ್‌ಗಳ ಮೂಲಕ ಅಭಿಯಾನವನ್ನು ಬೆಂಬಲಿಸುತ್ತಿದ್ದಾರೆ.

ಅಭಿಯಾನಕ್ಕೆ ಎಚ್.ಡಿ.ಕೆ ಬೆಂಬಲ: ಜೆ.ಡಿ.ಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕೂಡ ಸುಸಜ್ಜಿತ ಆಸ್ಪತ್ರೆಯ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿದ ಅವರು, ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನ ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ. ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ’ ಎಂದು ಹೇಳಿದ್ದಾರೆ.

ಇದಕ್ಕೆ ಹಲವರು ಪ್ರತಿಕ್ರಿಯಿಸಿದ್ದು, ತಾವು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಭರವಸೆ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಒತ್ತಾಯಿಸಿ, 2019ರಲ್ಲಿ ಮೊದಲ ಬಾರಿ ಟ್ವೀಟ್ ಅಭಿಯಾನ ಮಾಡಲಾಗಿತ್ತು. ಆಗ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT