ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸಂಖ್ಯೆ 122ಕ್ಕೇರಿಕೆ

ಗ್ರಾಮೀಣ ಭಾಗದಲ್ಲಿ ಒಂದೇ ಕಡೆ 100 ವಿದ್ಯಾರ್ಥಿಗಳಿದ್ದರೆ ಹೊಸ ಕೇಂದ್ರ ಆರಂಭ
Last Updated 24 ಜೂನ್ 2021, 19:30 IST
ಅಕ್ಷರ ಗಾತ್ರ

ಕಾರವಾರ: ಕೋವಿಡ್ ಪರಿಸ್ಥಿತಿಯ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಸರ್ಕಾರ ಸೂಚಿಸಿದ ನಿಯಮಾವಳಿಗಳ ಪಾಲನೆಯೂ ಅನಿವಾರ್ಯವಾಗಿದೆ. ಹೀಗಾಗಿ ಉತ್ತರ ಕನ್ನಡದ ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 49 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲುಶಿಕ್ಷಣ ಇಲಾಖೆ ನಿರ್ಧರಿಸಿದೆ. ಹೀಗಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆ 73ರಿಂದ 122ಕ್ಕೇರಿದೆ.

ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿದ್ದ 38 ಕೇಂದ್ರಗಳ ಬದಲು 60 ಹಾಗೂ ಶಿರಸಿ ಜಿಲ್ಲೆಯಲ್ಲಿ 35 ಕೇಂದ್ರಗಳ ಜೊತೆಗೆ 27 ಕೇಂದ್ರಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಒಂದೇ ಕಡೆ 100 ವಿದ್ಯಾರ್ಥಿಗಳಿದ್ದರೆ ಅಲ್ಲಿ ಹೊಸ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಅಂಕೋಲಾ ತಾಲ್ಲೂಕಿನ ಹಿಲ್ಲೂರು, ಸುಂಕಸಾಳ, ಶಿರಸಿ ತಾಲ್ಲೂಕಿನ ಬಂಡಲ, ದೇವನಹಳ್ಳಿಯಲ್ಲಿ ಪರೀಕ್ಷೆ ಕೇಂದ್ರಗಳು ಆರಂಭವಾಗಲಿವೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ ಸಲುವಾಗಿ ತಾಲ್ಲೂಕು ಕೇಂದ್ರಗಳಿಗೆ ಬರುವುದು ತಪ್ಪಲಿದೆ.

ಕೋವಿಡ್ ಕಾರಣದಿಂದ ಅನಿಶ್ಚಿತವಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಯವುದರ ಜೊತೆಗೇ ಜೂನ್ 15ರಿಂದ ಈ ಬಾರಿಯ ಶೈಕ್ಷಣಿಕ ವರ್ಷವೂ ಶುರುವಾಗಿದೆ. ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬದಲಾದ ಸ್ವರೂಪದ ಬಗ್ಗೆ ತರಬೇತಿ ನೀಡುತ್ತಿದ್ದಾರೆ.

‘ಶಿರಸಿ ಜಿಲ್ಲೆಯಲ್ಲಿ ‘ಪ್ರೇರಣಾ ಶಿಬಿರ’ಗಳನ್ನು ಆರಂಭಿಸಲಾಗಿದೆ. ಈ ಹಿಂದಿನ ಪರೀಕ್ಷೆಗಳಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಶೇ 100 ಅಂಕ ಗಳಿಸುವ ಗುರಿಯೊಂದಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಉಪ ನಿರ್ದೇಶಕ ದಿವಾಕರ ಶೆಟ್ಟಿ ತಿಳಿಸಿದ್ದಾರೆ.

‘ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಕಾಳಜಿಗೂ ಇಲಾಖೆ ಮುಂದಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಮಕ್ಕಳಿಗೆ ಎನ್– 95 ಮುಖಗವಸು ನೀಡಲಾಗುತ್ತದೆ. ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆಗೆ ಹಾಜರಾಗಲು ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದು ಕಾರವಾರ ಜಿಲ್ಲೆಯ ಉಪ ನಿರ್ದೇಶಕ ಹರೀಶ ಗಾಂವ್ಕರ್ ತಿಳಿಸಿದ್ದಾರೆ.

ಮೊಬೈಲ್ ಲಭ್ಯತೆ ಕುರಿತು ಸಮೀಕ್ಷೆ:

‘ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಹಾಗೂ ಪಾಲಕರ ಬಳಿ ಸ್ಮಾರ್ಟ್ ಫೋನ್‌ಗಳಿವೆ ಎಂಬ ಸಮೀಕ್ಷೆ ಮಾಡಲಾಗುತ್ತಿದ್ದು, ಒಂದು ವಾರದಲ್ಲಿ ಪೂರ್ಣಗೊಳ್ಳಬಹುದು. ಈ ಮಾಹಿತಿಯನ್ನು ಆಧರಿಸಿ ಆನ್‌ಲೈನ್ ತರಗತಿಗಳಿಗೆ ಎಷ್ಟು ಮಂದಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂಬುದನ್ನು ಲೆಕ್ಕಾಚಾರ ಹಾಕಲು ಸಾಧ್ಯವಾಗುತ್ತದೆ’ ಎಂದು ಡಿಡಿಪಿಐ ಹರೀಶ ಗಾಂವ್ಕರ್ ತಿಳಿಸಿದರು.

‘ದೂರದರ್ಶನದ ಚಂದನ ವಾಹಿನಿಯಲ್ಲಿ ವಿದ್ಯಾರ್ಥಿಗಳಿಗೆ ಸಂವೇದಾ ಇ– ಕಲಿಕಾ ತರಗತಿಗಳು ನಡೆಯುತ್ತಿವೆ. ಆದರೆ, ಎಲ್ಲ ಮಕ್ಕಳ ಮನೆಗಳಲ್ಲಿ ಟಿ.ವಿ ಸಂಪರ್ಕ ಇರಲಿಕ್ಕಿಲ್ಲ. ಅಂಥವರಿಗೆ ಅನುಕೂಲವಾಗುವಂತೆ ಗ್ರಾಮದ ಕೇಂದ್ರದಲ್ಲಿ ಅಥವಾ ಸಮುದಾಯ ಭವನಗಳಲ್ಲಿ ಟಿ.ವಿ ಅಳವಡಿಸಲು ಚಿಂತನೆ ನಡೆಸಲಾಗಿದೆ’ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅಂಕಿ ಅಂಶ

10,033

ಶಿರಸಿ ಶೈಕ್ಷಣಿಕ ಜಿಲ್ಲೆ

10,252

ಕಾರವಾರ ಶೈಕ್ಷಣಿಕ ಜಿಲ್ಲೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT