ಬುಧವಾರ, ಮೇ 18, 2022
28 °C
ಕಾರವಾರ ತಾಲ್ಲೂಕು ಗ್ರಾಮ ಪಂಚಾಯಿತಿಗಳಲ್ಲಿ ಮೀಸಲಾತಿ ನಿಗದಿ

ಅಧ್ಯಕ್ಷ, ಉಪಾಧ್ಯಕ್ಷರಾಗಲು ಲಾಬಿ ಜೋರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಯನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಇದರೊಂದಿಗೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸ್ಥಳೀಯ ರಾಜಕಾರಣ ಮತ್ತಷ್ಟು ಬಿರುಸಾಗಿದೆ.

ನಗರದ ರಂಗಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಂತ್ರಾಂಶ ಆಧರಿಸಿ ಮೀಸಲಾತಿ ನಿಗದಿ ಮಾಡಲಾಯಿತು. ತಾಲ್ಲೂಕಿನಲ್ಲಿ ಅನುಸೂಚಿತ ಜಾತಿಗೆ ಒಂದು, ಹಿಂದುಳಿದ ‘ಅ’ ವರ್ಗಕ್ಕೆ ಐದು, ಹಿಂದುಳಿದ ‘ಬ’ ವರ್ಗಕ್ಕೆ ಒಂದು ಮತ್ತು ಸಾಮಾನ್ಯಕ್ಕೆ 11 ಸ್ಥಾನಗಳು ಮೀಸಲಾಗಿದ್ದವು.

ಮೀಸಲಿರಿಸಬೇಕಾದ ಹುದ್ದೆಗಳು ಗ್ರಾಮ ಪಂಚಾಯಿತಿಗಳ ಸಂಖ್ಯೆಗಿಂತ ಕಡಿಮೆ ಇದ್ದ ಗ್ರಾಮಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳನ್ನು ಲಾಟರಿ ಎತ್ತುವ ಮೂಲಕ ನಿಗದಿ ಮಾಡಲಾಯಿತು. ತಂತ್ರಾಂಶದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾದ ಜಾತಿಯ ಸಮುದಾಯದವರು ಇಲ್ಲದ ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು. ಅದರ ಸೂಚನೆಯಂತೆ ಮೀಸಲಾತಿ ನಿಗದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

15ರೊಳಗೆ ಆಯ್ಕೆ: ಜಿಲ್ಲೆಯ 12 ತಾಲ್ಲೂಕುಗಳ 227 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ಎರಡೂ ಸ್ಥಾನಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರು ಫೆ. 15ರ ಒಳಗಾಗಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ನಂತರ ಆ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಮೀಸಲಾತಿ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಉಪವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದಕುಮಾರ ಬಾಲಪ್ಪನವರ ಹಾಗೂ ತಹಶೀಲ್ದಾರ್ ಆರ್.ವಿ. ಕಟ್ಟಿ ಉ‍ಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು